ಜೇವರ್ಗಿ ವಿವಿಧೆಡೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಭೇಟಿ: ಬೆಳೆ ಹಾನಿ ಪರಿಶೀಲನೆ, ಎಸ್‌ಐಆರ್ ಪ್ರಗತಿ ಅವಲೋಕನ

ಜೇವರ್ಗಿ: ತಾಲೂಕಿನ ವಿವಿಧೆಡೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಬೆಳೆ ಹಾನಿ ಪರಿಶೀಲನೆ ನಡೆಸಿ ರೈತರೊಂದಿಗೆ ಸಮಾಲೋಚನೆ ನಡೆಸಿದರು. ಅಲ್ಲದೆ, ಎಸ್‌ಐಆರ್ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ತಾಲ್ಲೂಕಿನ ಕಟ್ಟಿ ಸಂಗಾವಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮಳೆಯ ಕೊರತೆಯಿಂದ ಹಾನಿಗೊಳಗಾದ ಬೆಳೆಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳೀಯ ರೈತರೊಂದಿಗೆ ಚರ್ಚಿಸಿ ಬೆಳೆ ಹಾನಿಯ ಮಾಹಿತಿ ಪಡೆದರು. ಹಾನಿಗೊಳಗಾದ ಬೆಳೆಗಳ ಸಮಗ್ರ ವರದಿಯನ್ನು ತಕ್ಷಣ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಎಸ್‌ಐಆರ್ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಂದ ಕಾರ್ಯದ ಪ್ರಗತಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು.
ಬಳಿಕ ಪಟ್ಟಣದ ಮಳೆ ಮಾಪನ ಕೇಂದ್ರಕ್ಕೆ ಭೇಟಿ ನೀಡಿ ದಿನಾಂಕವಾರು ಮಳೆಯ ಪ್ರಮಾಣದ ವಿವರಗಳನ್ನು ಪರಿಶೀಲಿಸಿದರು. ತಾಲ್ಲೂಕು ಕ್ರೀಡಾಂಗಣಕ್ಕೆ ತೆರಳಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ವೀಕ್ಷಿಸಿ, ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹರವಾಳ ಗ್ರಾಮದ ಭೀಮಾ ನದಿಯ ಬ್ರೀಡ್ಜ್ ಕಂ ಬ್ಯಾರೇಜ್ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿಯ ಗುಣಮಟ್ಟ ಹಾಗೂ ಪ್ರಗತಿಯ ಕುರಿತು ಮಾಹಿತಿ ಪಡೆದರು. ಜೇವರ್ಗಿ ಪಟ್ಟಣದ ಶಾಂತನಗರದಲ್ಲಿ ಎಸ್‌ಐಆರ್ ಕಾರ್ಯದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪ್ರಗತಿಯನ್ನೂ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು, ಜೇವರ್ಗಿ ತಹಶೀಲ್ದಾರ್ ಅಂಜುಮ್ ತಬಸ್ಸುಮ್, ಯಡ್ರಾಮಿ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.






