ಜೇವರ್ಗಿ | ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ ಖಂಡನೀಯ : ಸಿದ್ದು ಕೆರೂರ

ಜೇವರ್ಗಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆಯ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಅಶ್ರುವಾಯು ಪ್ರಯೋಗಿಸಿರುವುದು ಖಂಡನೀಯ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ತಾಲೂಕು ಸಂಚಾಲಕ ಸಿದ್ದು ಕೆರೂರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 20 ದಿನಗಳಿಗೂ ಹೆಚ್ಚು ಕಾಲ ಉಪವಾಸ ಸತ್ಯಾಗ್ರಹ ನಡೆಸಿದ ವಿದ್ಯಾರ್ಥಿಗಳು ಬಳಿಕ ಆಯೋಜಿಸಿದ್ದ ‘ಸಂಸತ್ ಚಲೋ’ ಪ್ರತಿಭಟನೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಜನರು ಶಾಂತಿಯುತವಾಗಿ ಭಾಗವಹಿಸಿದ್ದರು. ಅವರ ಮೇಲೆ ಪೊಲೀಸ್ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.
ಯುವಜನರ ನ್ಯಾಯಸಮ್ಮತ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ಅವರ ಧ್ವನಿಯನ್ನು ದಮನಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ. ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆ ಉಂಟಾದರೆ ಅದು ವಿದ್ಯಾರ್ಥಿಗಳ ಪರಿಶ್ರಮಕ್ಕೆ ಮಾತ್ರವಲ್ಲ, ದೇಶದ ಶಿಕ್ಷಣ ವ್ಯವಸ್ಥೆ ಹಾಗೂ ಸಾರ್ವಜನಿಕ ಸಂಸ್ಥೆಗಳ ಮೇಲಿನ ಜನರ ವಿಶ್ವಾಸಕ್ಕೂ ಹೊಡೆತ ನೀಡುತ್ತದೆ ಎಂದು ಸಿದ್ದು ಕೆರೂರ ಅಭಿಪ್ರಾಯಪಟ್ಟಿದ್ದಾರೆ.






