Jewargi | ಭೂಮಾನಂದ ಭೀಕರ ಹತ್ಯೆ; ಆರೋಪಿಗಳ ಬಂಧನಕ್ಕೆ ಕೇರೂರು ಆಗ್ರಹ

ಜೇವರ್ಗಿ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಎಂಬ ದಲಿತ ಯುವಕನ ಭೀಕರ ಹತ್ಯೆಯನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಸಿದ್ದು ಕೇರೂರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ದಲಿತರ ಮೇಲೆ ಮಾರಣಾಂತಿಕ ಹಲ್ಲೆ, ಕೊಲೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಭೂಮಾನಂದ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಿ, ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು. ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹತ್ಯೆಗೀಡಾದ ಭೂಮಾನಂದ ಅವರ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ನೀಡುವುದರ ಜೊತೆಗೆ ಸರ್ಕಾರ ತಕ್ಷಣವೇ ಪರಿಹಾರ ಒದಗಿಸಬೇಕು ಎಂದು ಸಿದ್ದು ಕೇರೂರು ಸರ್ಕಾರವನ್ನು ಆಗ್ರಹಿಸಿದ್ದಾರೆ.






