Jewargi | ಫ.ಗು.ಹಳಕಟ್ಟಿ ಜಯಂತಿ ಆಚರಣೆ

ಜೇವರ್ಗಿ: ವಚನ ಸಾಹಿತ್ಯವನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಉಳಿಸಿದ ಮಹಾನ್ ವಿದ್ವಾಂಸ ಫ.ಗು. ಹಳಕಟ್ಟಿ ಅವರ ಜಯಂತಿಯನ್ನು ಜೇವರ್ಗಿಯಲ್ಲಿ ಶನಿವಾರ ವಿಜೃಂಭಣೆಯಿಂದ ಆಚರಿಸಲಾಯಿತು.
ಜಯಂತಿ ಅಂಗವಾಗಿ ಮಿನಿ ವಿಧಾನಸೌಧದಿಂದ ಸಜ್ಜನ ಕಲ್ಯಾಣ ಮಂಟಪದವರೆಗೆ ಫ.ಗು. ಹಳಕಟ್ಟಿ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ತಹಶೀಲ್ದಾರ್ ಮಲ್ಲಣ್ಣ ಯಲಗೋಡೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸತೀಶ್ ಕುಮಾರ್ ಸಂಗನ್ ಮೆರವಣಿಗೆಗೆ ಚಾಲನೆ ನೀಡಿದರು.
ಬಳಿಕ ಸಜ್ಜನ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಎಚ್‌ಕೆಇ ಸೊಸೈಟಿ ಅಧ್ಯಕ್ಷ ಶಶೀಲ್ ಜಿ. ನಮೋಶಿ ಮಾತನಾಡಿ, ಫ.ಗು. ಹಳಕಟ್ಟಿ ಅವರು ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸಿದ ಕಾರಣದಿಂದಲೇ ಇಂದಿಗೂ ಕನ್ನಡಿಗರಿಗೆ ವಚನಗಳನ್ನು ಅಧ್ಯಯನ ಮಾಡಲು ಸಾಧ್ಯವಾಗಿದೆ. ಅವರ ಅಪಾರ ಕೊಡುಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಸ್ಥಾಯಿಯಾಗಿದ್ದು, ಅವರ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ ಕನ್ನಡಪರರು, ಸಮಾಜಸೇವಕರು, ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕನ್ನಡ ವಿಷಯದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮರೆಪ್ಪ ಮುತ್ತ್ಯ ಬಸವಪಟ್ಟಣ, ತಹಶೀಲ್ದಾರ್ ಮಲ್ಲಣ್ಣ ಯಲಗೋಡೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸತೀಶ್ ಕುಮಾರ್ ಸಂಗನ್, ಸ್ವಾಗತ ಸಮಿತಿ ಅಧ್ಯಕ್ಷ ಭಗವಂತರಾಯಗೌಡ ಪಾಟೀಲ ಅಂಕಲಗಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.






