Jewargi | ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: 16 ಪ್ರಯಾಣಿಕರಿಗೆ ಗಾಯ

ಜೇವರ್ಗಿ : ಕಲಬುರಗಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪರಿಣಾಮ 16 ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡ ಘಟನೆ ತಾಲೂಕಿನ ಕೆಲ್ಲೂರು ಗ್ರಾಮದ ಸಮೀಪ ಮಂಗಳವಾರ ಸಂಜೆ ನಡೆದಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಅಧಿಕಾರಿಗಳು ಗಾಯಾಳುಗಳ ನೆರವಿಗೆ ಧಾವಿಸಿದ್ದು, ಗಾಯಗೊಂಡ ಪ್ರಯಾಣಿಕರನ್ನು ಜೇವರ್ಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ವೈದ್ಯರ ಮಾಹಿತಿ ಪ್ರಕಾರ ಎಲ್ಲರೂ ಅಪಾಯದಿಂದ ಪಾರಾಗಿದ್ದು, ಸಣ್ಣ ಪ್ರಮಾಣದ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಲ್ಲದೆ, ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯಿಂದ ಚಿಕಿತ್ಸೆ ಕುರಿತು ಮಾಹಿತಿ ಪಡೆದು ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಘಟನಾ ಸ್ಥಳಕ್ಕೆ ಜೇವರ್ಗಿ ಪೊಲೀಸ್ ಠಾಣೆಯ ಪಿಎಸ್ಐ ಗಜಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಕುರಿತು ಮಾಹಿತಿ ಸಂಗ್ರಹಿಸಿ ತನಿಖೆ ಕೈಗೊಂಡಿದ್ದಾರೆ.






