Jewargi | ಸೊನ್ನ ಗ್ರಾಮದಲ್ಲಿ ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಚಾಲನೆ

ಜೇವರ್ಗಿ: ತಾಲೂಕಿನ ಸೊನ್ನ ಗ್ರಾಮದಲ್ಲಿ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಇಲಾಖೆಯಿಂದ ಗೃಹ ಜ್ಯೋತಿ ಯೋಜನೆಯ ಪರಿಷ್ಕರಣೆಗಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಲಕ್ಕನ್ ಸಿಂಗ್ ಮಾತನಾಡಿ, ಗೃಹ ಜ್ಯೋತಿ ಯೋಜನೆಯ ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಯೋಜನೆಯಡಿ ಸಲ್ಲಿಕೆಯಾಗುವ ಎಲ್ಲಾ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ಸಮಯೋಚಿತವಾಗಿ ಸೇವೆ ಒದಗಿಸಬೇಕು. ಸರ್ಕಾರದ ಜನಪರ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯೆ ಅಂಜುಭಾಯಿ ರಾಠೋಡ್, ರುಕುಮ್ ತೋಲಾ ಭಾಗಬಾನ್ ಸೇರಿದಂತೆ ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.




