ಜೇವರ್ಗಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯಾಳವಾರದಲ್ಲಿ ಮೂರನೇ ದಿನವೂ ಮುಂದುವರಿದ ಧರಣಿ

ಜೇವರ್ಗಿ: ತಾಲೂಕಿನ ಯಾಳವಾರ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕಲ್ಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆದರ್ಶ ಗ್ರಾಮ ಸಮಿತಿಯ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಎದುರು ನಡೆಯುತ್ತಿರುವ ಧರಣಿ ಸತ್ಯಾಗ್ರಹ ಮೂರನೇ ದಿನವೂ ಮುಂದುವರಿದಿದೆ.
ಗ್ರಾಮದ ಕೂಲಿ ಕಾರ್ಮಿಕರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಕ್ಷಣ ಕೆಲಸ ಆರಂಭಿಸಬೇಕು. ಬರಗಾಲದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಉದ್ಯೋಗಾವಕಾಶಗಳಿಲ್ಲದೆ ಕೂಲಿ ಕಾರ್ಮಿಕರು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಅಲ್ಲದೆ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳು ಮಂಜೂರಾಗಿರುವ ಫಲಾನುಭವಿಗಳಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ಹಾಗೂ ಗ್ರಾಮದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಆದರ್ಶ ಗ್ರಾಮ ಸಮಿತಿ ಅಧ್ಯಕ್ಷ ಇಬ್ರಾಹಿಂ ಪಟೇಲ್ ಯಾಳವಾರ ಮಾತನಾಡಿ, “ಇದು ನಮ್ಮ ಹಕ್ಕಿಗಾಗಿ ನಡೆಸುತ್ತಿರುವ ಹೋರಾಟವಾಗಿದೆ. ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಸತ್ಯಾಗ್ರಹ ಮುಂದುವರಿಸಲಾಗುವುದು” ಎಂದು ತಿಳಿಸಿದ್ದಾರೆ.
ಧರಣಿಯಲ್ಲಿ ಸದ್ದಾಂ ಪಟೇಲ್ ಸಿಗರಥಹಳ್ಳಿ, ಶಾಂತಯ್ಯ ಗುತ್ತದಾರ್, ದೇವು ದೊರಿ, ನಿಂಗಪ್ಪ ಪೂಜಾರಿ, ನಾಗು ಗುತ್ತೇದಾರ್, ಬಸಪ್ಪ ಕುಂಬಾರ, ದೇವಿಂದ್ರಪ್ಪ ಅಣ್ಣೂರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.






