Jewargi | ದೂರು ದಾಖಲಿಸಲು ವಿಳಂಬ ಆರೋಪ : ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಜೇವರ್ಗಿ: ದೂರು ದಾಖಲಿಸಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರು ಠಾಣೆಯ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಶನಿವಾರ ತಾಲೂಕಿನ ನೆಲೋಗಿ ಪೊಲೀಸ್ ಠಾಣೆ ಎದುರು ನಡೆದಿದೆ.
ಯಾತನೂರ ಗ್ರಾಮದ ರೇವುಬಾಯಿ ಭೀಮರಾಯ ತಳವಾರ (40) ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಕುಟುಂಬದ ದೂರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಬಂದಿದ್ದಾಗ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ರೇವುಬಾಯಿ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ, ಬೇರೆಯವರ ಪ್ರಭಾವಕ್ಕೆ ಒಳಗಾಗಿ ಪೊಲೀಸರು ಬಡವರಿಗೆ ನ್ಯಾಯ ಒದಗಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ನೆಲೋಗಿ ಪೊಲೀಸ್ ಠಾಣೆ ಎದುರು ಸಾರ್ವಜನಿಕರು ಹಾಗೂ ಸ್ಥಳೀಯ ಹೋರಾಟಗಾರರು ಜಮಾಯಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೂರು ನೀಡಲು ಬಂದಿದ್ದ ಮಹಿಳೆಯ ಅಹವಾಲನ್ನು ತಕ್ಷಣ ಸ್ವೀಕರಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
“ರಕ್ಷಣೆ ನೀಡಬೇಕಾದ ಪೊಲೀಸರೇ ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ಆರೋಪಿಸಿದ ರೇವುಬಾಯಿ ಅವರ ಪುತ್ರ ನಾಗರಾಜ್, ಕಣ್ಣೀರಿಟ್ಟು ತಮ್ಮ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.
ರೇವುಬಾಯಿ ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ದೂರು ದಾಖಲಿಸಲು ವಿಳಂಬವಾಗಿದೆ ಎಂಬ ಕುಟುಂಬಸ್ಥರ ಆರೋಪದ ಬಗ್ಗೆಯೂ ಪೊಲೀಸ್ ಇಲಾಖೆ ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ಸ್ಥಳೀಯ ಹೋರಾಟಗಾರರು ಆಗ್ರಹಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






