ಜ್ಞಾನೋತ್ಸವ–2026 ಟೆಕ್ನೋ-ಕಲ್ಚರಲ್ ಉತ್ಸವ : ಬೀದರ್‌ನ ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ

ಕಲಬುರಗಿ: ನಗರದ ಪ್ರತಿಷ್ಠಿತ ಶರಣಬಸವ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ನಡೆದ ಜ್ಞಾನೋತ್ಸವ–2026 ಟೆಕ್ನೋ-ಕಲ್ಚರಲ್ ಉತ್ಸವ ಶನಿವಾರ ಅದ್ಧೂರಿಯಾಗಿ ಸಮಾರೋಪಗೊಂಡಿತು.
ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಹಾಗೂ ತಾಂತ್ರಿಕ ಕೌಶಲ್ಯಗಳಿಗೆ ವೇದಿಕೆಯಾದ ಈ ಉತ್ಸವದಲ್ಲಿ ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಸವರಾಜ ದೇಶಮುಖ ಹಾಗೂ ಚಂದ್ರಕಾಂತ ಪಾಟೀಲ ವಿಜೇತ ತಂಡಕ್ಕೆ ಟ್ರೋಫಿ ಪ್ರದಾನ ಮಾಡಿದರು.
ಇದೇ ವೇಳೆ ರನ್ನರ್ ಅಪ್ ಸ್ಥಾನ ಪಡೆದ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜು ತಂಡಕ್ಕೂ ಪ್ರಶಸ್ತಿ ಪ್ರದಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಸವರಾಜ ದೇಶಮುಖ, ಜ್ಞಾನೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂತೋಷ ತಂದಿದೆ. ವಿವಿಧ ಸ್ಪರ್ಧೆಗಳು, ಕಾರ್ಯಾಗಾರಗಳು ಹಾಗೂ ಮನರಂಜನಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ತುಂಬಿವೆ ಎಂದು ಹೇಳಿದರು.
ಡಾ. ಶರಣಬಸವಪ್ಪ ಅಪ್ಪ ಅವರು ತೋರಿದ ಮೌಲ್ಯಗಳ ಮಾರ್ಗದಲ್ಲಿ ಎಲ್ಲರೂ ಸಾಗಬೇಕು. ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಚಂದ್ರಕಾಂತ ಪಾಟೀಲ, ಶರಣಬಸವ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಕೇವಲ ಶಿಕ್ಷಣವನ್ನಷ್ಟೇ ಅಲ್ಲ, ಮಾನವೀಯ ಮೌಲ್ಯಗಳನ್ನೂ ಕಲಿಯುತ್ತಿದ್ದಾರೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಜೀವನದ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.
ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ, ಪೋಷಕರು ಮತ್ತು ಶಿಕ್ಷಕರಿಗೆ ಗೌರವ ನೀಡಬೇಕು. ಅಂಕಗಳಿಗೆ ಮಾತ್ರ ಸೀಮಿತವಾಗದೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ಕುಲಸಚಿವ ಡಾ. ಲಕ್ಷ್ಮೀ ಪಾಟೀಲ ಮಾಕಾ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್.ಎಚ್. ಹೊನ್ನಳ್ಳಿ, ಹಣಕಾಸು ಅಧಿಕಾರಿ ಡಾ. ಕಿರಣ ಮಾಕಾ ಹಾಗೂ ಸಂಶೋಧನಾ ಡೀನ್ ಡಾ. ಸುಜಾತಾ ಮಲ್ಲಾಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಯ ಎಲ್ಲಾ ವಿಭಾಗಗಳ ಡೀನರು, ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರಂಭದ ಆರಂಭದಲ್ಲಿ ವಿಶ್ವವಿದ್ಯಾಲಯದ ಡೀನ್ ಡಾ. ಶಿವಕುಮಾರ ಜವಳಿಗಿ ಅತಿಥಿಗಳನ್ನು ಸ್ವಾಗತಿಸಿದರು.






