ಕಲಬುರಗಿ | ಸೇಡಂ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆ ಕಾಮಗಾರಿಗೆ ಸಚಿವ ಡಾ.ಶರಣಪ್ರಕಾಶ್ ಭೂಮಿಪೂಜೆ

ಕಲಬುರಗಿ: ಸೇಡಂ ತಾಲೂಕಿನ 100 ಹಾಸಿಗೆ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆಯನ್ನು 150 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಭೂಮಿಪೂಜೆ ನೆರವೇರಿಸಿದರು.
ಈ ಕಾಮಗಾರಿಗೆ 16.50 ಕೋಟಿ ರೂ. ವೆಚ್ಚವಾಗಲಿದ್ದು, 2024-25ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆ ಹಾಗೂ ರಾಜ್ಯ ವಲಯ ಅನುದಾನದಡಿ ಅನುದಾನ ಬಿಡುಗಡೆ ಮಾಡಲಾಗಿದೆ. ಸೇಡಂ ತಾಲೂಕಿನ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಅನುದಾನ ಒದಗಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಸೇಡಂ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿದ ಬಳಿಕ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಲಭ್ಯವಾಗಲಿದೆ. ಕಾಂಗ್ರೆಸ್ ಸರ್ಕಾರ ಬಡಜನರ ಹಿತಾಸಕ್ತಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡುತ್ತಿದೆ. ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಸಿಸಿ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಂಡಿದೆ ಎಂದು ಸಚಿವರು ವಿವರಿಸಿದರು.
ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬಡಜನರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಗೆ ಹೋಗುವ ಅವಶ್ಯಕತೆ ಇಲ್ಲ. ಬಡವರ ಹಿತಾಸಕ್ತಿ ಕಾಯುವುದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ತಹಶೀಲ್ದಾರ್ ಶ್ರೀಯಾಂಕ ಧನಶ್ರೀ, ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜುಕುಮಾರ ಪಾಟೀಲ, ಪುರಸಭೆ ಅಧ್ಯಕ್ಷ ವೀರೇಂದ್ರ ರೂದ್ನೂರ, ಕಾಂಗ್ರೆಸ್ ಮುಖಂಡ ಬಸವರಾಜ ಪಾಟೀಲ ಉಡಗಿ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಶಿವಶರಣರೇಡ್ಡಿ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಶರಣಬಸಪ್ಪ ಕ್ಯಾತನಾಳ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೋಮಶೇಖರ್ ಪೂಜಾರಿ, ಕಾಂಗ್ರೆಸ್ ಮುಖಂಡರು ಸತೀಶ್ ರೇಡಿ ರಂಜೋಳ, ಅಬ್ದುಲ್ ಗಫೂರ್, ರಶೀದ್ ರಂಜೋಳ, ಸಂತೋಷ ತಳವಾರ, ನಾಗಪ್ಪ ಎಳ್ಳಿ, ದೇವು ದೋರೆ, ರವೀಂದ್ರ ನಂದಿಗಾವ್, ಜಗನ್ನಾಥ ಚಿಂತ್ಪಳ್ಳಿ ಹಾಗೂ ಹಲವರು ಉಪಸ್ಥಿತರಿದ್ದರು.







