ಕಲಬುರಗಿ | ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ : ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅ.7ರಂದು ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಕಲಬುರಗಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಸಂಬoಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ. ಎಸ್.ಎಂ. ಪಂಡಿತ ರಂಗಮಂದಿರವರೆಗೆ ಮೆರವಣಿಗೆಯನ್ನು ಆಯೋಜಿಸಲಾಗುತ್ತದೆ. ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲು ನುರಿತ ಉಪನ್ಯಾಸಕರರಾದ ಸುರಪೂರ ಪ್ರಭು ಮಹಾವಿದ್ಯಾಲಯದ ಉಪನ್ಯಾಸಕ ಡಾ.ಉಪೇಂದ್ರ ನಾಯಕ ಸುಬೇದಾರ್ ಅವರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.
ಅಂದು ಬೆಳಿಗ್ಗೆ 9ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ, ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಹಾಗೂ ಅನುದಾನ, ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಬೇಕು. ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರು ವ್ಯವಸ್ಥೆ ಹಾಗೂ ಸ್ವಚ್ಛತೆ ಕಾಪಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ಚಂದ್ರಶೇಖರ್, ಕಲಬುರಗಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಗುರುರಾಜ್ ಎಚ್. ಸುಬೇದಾರ್, ಸಮಾಜದ ಮುಖಂಡರಾದ ಯಲ್ಲಾಲಿಂಗ ಬಿರಾಳ, ಶ್ರವಣಕುಮಾರ್, ರಾಜು ಮಾವನೂರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಇತರ ಸಮಾಜಗಳ ಪ್ರತಿನಿಧಿಗಳು ಭಾಗವಹಿಸಿದ್ದರು.







