Kalaburagi | ದೆವ್ವ ಹಿಡಿದಿದೆ ಎಂದು ಬೇವಿನ ಕಟ್ಟಿಗೆಯಿಂದ ಹಲ್ಲೆ ಆರೋಪ; ಮಹಿಳೆ ಮೃತ್ಯು

ಸಾಂದರ್ಭಿಕ ಚಿತ್ರ | PC : gemini
ಕಲಬುರಗಿ : ದೆವ್ವ ಹಿಡಿದಿದೆ ಎಂಬ ಅಂಧವಿಶ್ವಾಸಕ್ಕೆ ಒಳಗಾದ ಗಂಡನ ಮನೆಯವರು, ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಆಳಂದ ಮೂಲದ ಮುಕ್ತಾಬಾಯಿ ಎಂಬ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೆ ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಆಳಂದ ಪಟ್ಟಣದ ವೆಂಕಟೇಶ್ವರ ನಗರದ ನಿವಾಸಿಯಾದ ಮುಕ್ತಾಬಾಯಿ ಅವರನ್ನು ಆರು ವರ್ಷಗಳ ಹಿಂದೆ ಮಹಾರಾಷ್ಟ್ರದ ಮುರುಮ್ ಗ್ರಾಮದ ಗಿಡ್ಡೆಪ್ಪ ಎಂಬಾತನ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿಗೆ ಐದು ವರ್ಷದ ಮಗನಿದ್ದಾನೆ. ಆದರೆ, ಕಳೆದ ಕೆಲವು ದಿನಗಳಿಂದ ಮುಕ್ತಾಬಾಯಿಗೆ ದೆವ್ವ ಹಿಡಿದಿದೆ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಮೃತಳ ತಾಯಿ ತಿಪ್ಪವ್ವ ಆರೋಪಿಸಿದ್ದಾರೆ.
ಇನ್ನೊಂದೆಡೆ ನನ್ನ ಅಕ್ಕನಿಗೆ ಯಾವುದೇ ದೆವ್ವ ಹಿಡಿದಿರಲಿಲ್ಲ. ಗಂಡನ ಮನೆಯವರೇ ದೆವ್ವದ ನಾಟಕವಾಡಿ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಮೃತಳ ಸಹೋದರಿ ಶ್ರೀದೇವಿ ಆರೋಪ ಮಾಡಿದ್ದಾರೆ.
ಶುಕ್ರವಾರ ಮುಕ್ತಾಬಾಯಿ ಮನೆಯಲ್ಲಿ ಕುಸಿದು ಬಿದ್ದಾಗ, ದೆವ್ವದ ಅಬ್ಬರ ಎಂದು ಭಾವಿಸಿದ ಸಂಬಂಧಿಕರು ಐದು ವರ್ಷದ ಮಗನ ಎದುರಲ್ಲೇ ಬೇವಿನ ಕಟ್ಟಿಗೆಗಳಿಂದ ಆಕೆಗೆ ಮನಬಂದಂತೆ ಥಳಿಸಿ, ಹಲ್ಲೆಗೈದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಲೆ ಮತ್ತು ದೇಹದ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿದ್ದರೂ, ಆಕೆಯನ್ನು ಆಸ್ಪತ್ರೆಗೆ ಸೇರಿಸುವ ಬದಲು ಗಾಣಗಾಪುರದ ಸಂಗಮ ನದಿಯಲ್ಲಿ ಸ್ನಾನ ಮಾಡಿಸಿ ದತ್ತನ ಸನ್ನಿಧಿಯಲ್ಲಿ ಪೂಜೆ ಮಾಡಿಸಿದ್ದಾರೆ ಎನ್ನಲಾಗಿದೆ. ಅಲ್ಲಿಂದ ಗುರುಮಠಕಲ್ ಕಡೆಗೆ ಮತ್ತೊಂದು ಪೂಜೆಗಾಗಿ ಕರೆದೊಯ್ಯುವಾಗ ಮುಕ್ತಾಬಾಯಿ ತೀವ್ರ ಅಸ್ವಸ್ಥಗೊಂಡಿದ್ದಾರೆ . ಕೂಡಲೇ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಮುಂದಿನ ಕಾನೂನು ಕ್ರಮ ಹಾಗೂ ತನಿಖೆಗಾಗಿ ಪ್ರಕರಣವನ್ನು ಮಹಾರಾಷ್ಟ್ರದ ಮುರುಮ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು, ಈ ಕುರಿತು ಪ್ರತಿಕ್ರಿಯಿಸಿದ ಆಳಂದ ಪೊಲೀಸ್ ಠಾಣೆಯ ಪಿಐ ಶರಣಬಸಪ್ಪ ಕೊಡ್ಲಾ ಅವರು, "ಮೃತ ಮಹಿಳೆ ಆಳಂದ ಪಟ್ಟಣದವಳಾಗಿದ್ದಾಳೆ. ಆದರೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಮಾಹಿತಿ ಗೊತ್ತಾಗಿದ್ದರಿಂದ ಪ್ರಕರಣವನ್ನು ಮಹಾರಾಷ್ಟ್ರದ ಮುರುಮ್ ಠಾಣೆಗೆ ವರ್ಗಾಯಿಸಲಾಗಿರುತ್ತದೆ. ಆಳಂದ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.







