Kalaburagi | 80ನೇ ಸ್ವಾತಂತ್ರ್ಯೋತ್ಸವಕ್ಕೆ ಜಿಲ್ಲಾಡಳಿತ ಸಜ್ಜು; ವಿಜೃಂಭಣೆಯಿಂದ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

ಕಲಬುರಗಿ: ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಅರ್ಥಪೂರ್ಣ, ಶಿಸ್ತಿನ ಹಾಗೂ ವಿಜೃಂಭಣೆಯ ಆಚರಣೆಯಾಗಿ ರೂಪಿಸಲು ಅಗತ್ಯವಿರುವ ಎಲ್ಲ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಡಿ.ಆರ್. ಪರೇಡ್ ಮೈದಾನದಲ್ಲಿ ಮುಖ್ಯ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಮಳೆ ಬಂದರೂ ಅಡಚಣೆ ಆಗದಂತೆ ಜರ್ಮನ್ ಟೆಂಟ್ ಹಾಗೂ ಶಾಮಿಯಾನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮೈದಾನ ಸಮತಟ್ಟುಗೊಳಿಸುವಿಕೆ ಮತ್ತು ವೇದಿಕೆ ನಿರ್ಮಾಣದ ಹೊಣೆಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಮಹಾನಗರ ಪಾಲಿಕೆಗೆ ವಹಿಸಲಾಗಿದೆ. ಅಗ್ನಿಶಾಮಕ ವಾಹನ, ಆಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡಗಳು ಸನ್ನದ್ಧವಾಗಿರಬೇಕು ಎಂದರು.
ಆಗಸ್ಟ್ 15ರಂದು ಬೆಳಿಗ್ಗೆ 7.30ಕ್ಕೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು. ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಬೆಳಿಗ್ಗೆ 8.15ರೊಳಗೆ ಡಿ.ಆರ್. ಪರೇಡ್ ಮೈದಾನದಲ್ಲಿ ಹಾಜರಿರಬೇಕು. ಕರ್ತವ್ಯಲೋಪ ಅಥವಾ ಗೈರುಹಾಜರಾಗುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಬಾರಿಯ ಸ್ವಾತಂತ್ರ್ಯೋತ್ಸವದ ವಿಶೇಷ ಆಕರ್ಷಣೆಯಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಕಲಾವಿದರಿಗೆ ಮುಕ್ತ ಆಡಿಷನ್ ಆಯೋಜಿಸಲಾಗುತ್ತಿದೆ. ಆಸಕ್ತರು ಮುಂದಿನ 3–4 ದಿನಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಿಡಿಪಿಐ ಅಥವಾ ಡಿಡಿಪಿಯು ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಆಗಸ್ಟ್ 5 ಅಥವಾ 6ರಂದು ನಡೆಯುವ ಆಡಿಷನ್‌ನಲ್ಲಿ ಆಯ್ಕೆಯಾಗುವ ತಂಡಗಳಿಗೆ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಗೃಹರಕ್ಷಕ ದಳ ಹಾಗೂ ಎನ್‌ಸಿಸಿ ತಂಡಗಳಿಂದ ಪಥಸಂಚಲನ ನಡೆಯಲಿದೆ. ನಗರದ ಪ್ರಮುಖ ವೃತ್ತಗಳಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್, ಮಹಾತ್ಮ ಗಾಂಧಿ ಹಾಗೂ ಬಾಬು ಜಗಜೀವನ ರಾಂ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುವುದು. ಸರ್ಕಾರಿ ಕಚೇರಿಗಳು ಹಾಗೂ ಪ್ರಮುಖ ವಾಣಿಜ್ಯ ಸಂಕೀರ್ಣಗಳನ್ನು ವಿದ್ಯುತ್ ದೀಪಾಲಂಕಾರದಿಂದ ಅಲಂಕರಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಂಜೆ 5 ಗಂಟೆಗೆ ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಅಡ್ಡೂರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಸಿಂಧೆ, ಎಸಿಪಿ ಪ್ರವೀಣ್ ನಾಯಕ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ಶಿಖರ್ ಮೋಘ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






