Kalaburagi | ಜಮೀನು ಮ್ಯೂಟೇಷನ್‌ಗೆ 10 ಸಾವಿರ ರೂ. ಲಂಚ: ಗ್ರಾಮ ಲೆಕ್ಕಿಗನ ಸಹಾಯಕ ಲೋಕಾಯುಕ್ತ ಬಲೆಗೆ

ಕಲಬುರಗಿ : 7 ಎಕರೆ 34 ಗುಂಟೆ ಜಮೀನಿನ ಮ್ಯೂಟೇಷನ್ ಮಾಡಿಕೊಡಲು 10 ಸಾವಿರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಗ್ರಾಮ ಲೆಕ್ಕಿಗನ ಸಹಾಯಕನೊಬ್ಬ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ಘಟನೆ ನಗರದಲ್ಲಿ ಗುರುವಾರ ನಡೆದಿದೆ.
ಇಲ್ಲಿನ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಕಂದಾಯ ಇಲಾಖೆ ಕಚೇರಿಯಲ್ಲಿ ಈ ಕಾರ್ಯಾಚರಣೆ ನಡೆಸಿದ್ದು, ದೂರುದಾರ ಸತೀಶ್ ಅವರಿಂದ 10 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ಸಾಗರ್ ಎಂಬಾತನನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
7 ಎಕರೆ 34 ಗುಂಟೆ ಜಮೀನಿನ ಮ್ಯೂಟೇಷನ್ ಮಾಡಿಕೊಡಲು ಗ್ರಾಮ ಲೆಕ್ಕಿಗ ರಮೇಶ್ ಕಡೆಮನಿ ಅವರು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಸತೀಶ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಸಾಗರ್ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಲಂಚದ ಹಣವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಮುರುಗುಂಡಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಳ್ಳಲಾಗಿದೆ.






