Kalaburagi | ಸಂಚಾರ ನಿಯಮ ಉಲ್ಲಂಘನೆ ದಂಡದ ಬಾಕಿ ಮೊತ್ತ ಪಾವತಿಗೆ ಶೇ.50 ರಷ್ಟು ರಿಯಾಯಿತಿ

ಸಾಂದರ್ಭಿಕ ಚಿತ್ರ | Photo credit : PTI
ಕಲಬುರಗಿ: ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ (E-Challan) ಹಾಗೂ ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ನೀಡಲಾಗಿದ್ದು, ವಾಹನ ಚಾಲಕರು ಹಾಗೂ ವಾಹನ ಮಾಲೀಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮನವಿ ಮಾಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು, ಮೇ 2026ರ ಮೊದಲು ಪೊಲೀಸ್ ಇಲಾಖೆಯ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾಗಿದ್ದು ಇನ್ನೂ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅದೇ ರೀತಿ, ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರ ಅವಧಿಯಲ್ಲಿ ದಾಖಲಾಗಿ ಇನ್ನೂ ಪಾವತಿಯಾಗದಿರುವ ಪ್ರಕರಣಗಳ ದಂಡದ ಮೊತ್ತಕ್ಕೂ ಶೇ.50 ರಷ್ಟು ರಿಯಾಯಿತಿ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಈ ವಿಶೇಷ ಸೌಲಭ್ಯದಡಿ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಜೂನ್ 21, 2026ರಿಂದ ಜುಲೈ 10, 2026ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಂದರೆ ಒಟ್ಟು 20 ದಿನಗಳ ಕಾಲಾವಕಾಶ ನೀಡಲಾಗಿದೆ.
ಆದ್ದರಿಂದ ವಾಹನ ಚಾಲಕರು, ವಾಹನ ಮಾಲೀಕರು ಹಾಗೂ ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಂಡು ಬಾಕಿ ಇರುವ ದಂಡಗಳನ್ನು ರಿಯಾಯಿತಿ ದರದಲ್ಲಿ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮನವಿ ಮಾಡಿದೆ.






