ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿರುದ್ಧ ಎಬಿವಿಪಿ ಪ್ರತಿಭಟನೆ

ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಯ ಕಾರ್ಯವೈಖರಿಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಗುರುವಾರ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಸತಿ ನಿಲಯಗಳಲ್ಲಿ ಮೂಲಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ವಿದ್ಯಾರ್ಥಿ ಹೇಳಿದ ಸಮಸ್ಯೆಗಳ ಪರಿಹಾರದಲ್ಲಿ ಬಿಸಿಎಂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ, ತಕ್ಷಣ ಪ್ರತಿಭಟನಾ ಸ್ಥಳಕ್ಕೆ ಆಗಮಿಸುವಂತೆ ಕಾರ್ಯಕರ್ತರು ಕಚೇರಿ ಎದುರು ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆ ವೇಳೆ ಕೆಲ ಕಾರ್ಯಕರ್ತರು ಕಚೇರಿ ಆವರಣದಲ್ಲಿದ್ದ ಸಸಿಗಳ ಕುಂಡಲಗಳನ್ನು ನೆಲಕ್ಕೆ ಎಸೆದು ಒಡೆದು ಹಾಕಿದರು.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ನಂತರ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಮನವಿಯನ್ನು ಅಧಿಕಾರಿಗಳಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಶರಣು ಪೂಜಾರಿ,ರಾಜ್ಯ ಸಹ ಕಾರ್ಯದರ್ಶಿ ಹನುಮಂತ ಬಗಲಿ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರವಣ, ಕಾರ್ಯಕರ್ತರಾದ ಅವಿನಾಶ ಗುತ್ತೇದಾರ,ಸಂದೇಶ , ಮನೋಜ ಪಾಟೀಲ, ಮನೋಜ ಶೆಟ್ಟಿ ,ಶಿವು ಸಜ್ಜನ, ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಇದ್ದರು.






