Kalaburagi | ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ: ಅಧಿಕಾರಿಗಳಿಗೆ ಸಂಸದ ದೊಡ್ಡಮನಿ ಸೂಚನೆ

ಕಲಬುರಗಿ : ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ, ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ತಮ್ಮ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ (ಎಂಪಿಎಲ್‌ಎಡಿಎಸ್) ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಜಿಲ್ಲೆಯಲ್ಲಿ ಮಂಜೂರಾಗಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿಯನ್ನು ಅವಲೋಕಿಸಿ, ಸಾರ್ವಜನಿಕರಿಗೆ ಯೋಜನೆಗಳ ಪ್ರಯೋಜನ ಶೀಘ್ರ ತಲುಪುವಂತೆ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಷರೀಫ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇಲಾಖಾವಾರು ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ನೀಡಿದರು.
ಇದಾದ ಬಳಿಕ ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣ ಸಲಹಾ ಸಮಿತಿಯ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂಸದರು, ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳ ಅಭಿವೃದ್ಧಿಗೆ ಬೇಕಾದ ಕಾಮಗಾರಿಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಸೂಚಿಸಿದರು. ಸಂಬಂಧಿತ ಇಲಾಖೆಗಳ ಸಮನ್ವಯದೊಂದಿಗೆ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸುವಂತೆ ನಿರ್ದೇಶಿಸಿದರು.
ನಂತರ ನಗರದಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಮತ್ತೊಮ್ಮೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಷರೀಫ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರು, ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






