Kalaburagi | ವಿಕಸಿತ ಭಾರತ ಗುರಿ ಸಾಧನೆಗೆ ಕೈಗಾರಿಕೆ–ಶೈಕ್ಷಣಿಕ ಸಂಸ್ಥೆಗಳ ಸಹಯೋಗ ಅಗತ್ಯ: ಪ್ರೊ.ಬಟ್ಟು ಸತ್ಯನಾರಾಯಣ
ಉದ್ಯಮ–ಶೈಕ್ಷಣಿಕ ಸಮಾವೇಶ-2026

ಕಲಬುರಗಿ : ವಿಕಸಿತ ಭಾರತ 2047ರ ಗುರಿ ಸಾಕಾರಗೊಳಿಸಲು ಕೈಗಾರಿಕೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ನಡುವೆ ಬಲವಾದ ಸಹಯೋಗ ಅಗತ್ಯ. ಈ ಸಹಭಾಗಿತ್ವವು ನಾವೀನ್ಯತೆ, ಉದ್ಯಮಶೀಲತೆ, ಸಂಶೋಧನೆ ಹಾಗೂ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರ ಜತೆಗೆ ಪದವೀಧರರ ಉದ್ಯೋಗಾರ್ಹತೆಯನ್ನು ಹೆಚ್ಚಿಸಲಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.
ಬೆಂಗಳೂರಿನ ಭಾರತೀಯ ತೋಟಗಾರಿಕೆ ವ್ಯವಸ್ಥಾಪಕ ಸಂಸ್ಥೆ (ಐಐಪಿಎಂ)ಯಲ್ಲಿ ಶುಕ್ರವಾರ ಆಯೋಜಿಸಿದ್ದ ಉದ್ಯಮ–ಶೈಕ್ಷಣಿಕ ಸಮಾವೇಶ-2026ರಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಆಶಯದಂತೆ ವಿಶ್ವವಿದ್ಯಾಲಯಗಳ ಪಠ್ಯಕ್ರಮದಲ್ಲಿ ಅಪ್ರೆಂಟಿಸ್‌ಶಿಪ್, ಅನುಭವಾಧಾರಿತ ಕಲಿಕೆ ಮತ್ತು ಕೈಗಾರಿಕಾ ಕ್ಷೇತ್ರದ ಪ್ರಾಯೋಗಿಕ ತರಬೇತಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸಿಯುಕೆ ತನ್ನ ಶೈಕ್ಷಣಿಕ ಚೌಕಟ್ಟಿನಲ್ಲಿ ಅಪ್ರೆಂಟಿಸ್‌ಶಿಪ್ ಅವಕಾಶಗಳನ್ನು ಅಳವಡಿಸಿಕೊಳ್ಳಲು ಕ್ರಮ ಕೈಗೊಂಡಿದೆ ಎಂದರು.
ಕೈಗಾರಿಕೆಗಳು ವಿಶ್ವವಿದ್ಯಾಲಯಗಳೊಂದಿಗೆ ಕೈಜೋಡಿಸಿ ವಿದ್ಯಾರ್ಥಿಗಳಿಗೆ ತರಬೇತಿ, ಅಪ್ರೆಂಟಿಸ್‌ಶಿಪ್ ಹಾಗೂ ನೈಜ ಕಾರ್ಯಾನುಭವ ಒದಗಿಸಬೇಕು. ಕಲಿಕಾ ಪ್ರಯೋಗಾಲಯಗಳ ಸ್ಥಾಪನೆಗೂ ಸಹಕರಿಸಬೇಕು. ಇದರಿಂದ ವಿದ್ಯಾರ್ಥಿಗಳಲ್ಲಿ ಉದ್ಯಮಗಳ ಅಗತ್ಯಗಳಿಗೆ ಅನುಗುಣವಾದ ಕೌಶಲ್ಯ ಬೆಳೆಸಲು ಸಾಧ್ಯವಾಗಲಿದೆ ಎಂದು ಪ್ರತಿಪಾದಿಸಿದರು.
ವಿದ್ಯಾರ್ಥಿಗಳು ಕೇವಲ ಉದ್ಯೋಗಾಕಾಂಕ್ಷಿಗಳಾಗದೆ ಉದ್ಯೋಗ ಸೃಷ್ಟಿಕರ್ತರಾಗಬೇಕು. ಹೊಸ ಆಲೋಚನೆಗಳನ್ನು ಉದ್ಯಮಗಳಾಗಿ ಪರಿವರ್ತಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರಧಾನಮಂತ್ರಿ ಮುದ್ರಾ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ಆರ್ಥಿಕ ನೆರವು ಯೋಜನೆಗಳನ್ನು ಬಳಸಿಕೊಂಡು ಸ್ವಂತ ಉದ್ಯಮ ಆರಂಭಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಉದ್ಯಮ–ಶೈಕ್ಷಣಿಕ ಸಹಭಾಗಿತ್ವದಿಂದ ಕೈಗಾರಿಕೆಗಳಿಗೆ ವಿಶ್ವವಿದ್ಯಾಲಯಗಳ ಸಂಶೋಧನಾ ಸಾಮರ್ಥ್ಯ ಮತ್ತು ನವೀನ ಆಲೋಚನೆಗಳು ದೊರೆತರೆ, ಶೈಕ್ಷಣಿಕ ಸಂಸ್ಥೆಗಳಿಗೆ ತಂತ್ರಜ್ಞಾನ, ಪ್ರಾಯೋಗಿಕ ಪರಿಣತಿ ಹಾಗೂ ಸಂಪನ್ಮೂಲಗಳ ನೆರವು ಸಿಗಲಿದೆ. ಈ ಪರಸ್ಪರ ಸಹಕಾರದಿಂದ ಅನ್ವಯಿಕ ಸಂಶೋಧನೆ, ಉತ್ಪನ್ನ ಅಭಿವೃದ್ಧಿ ಮತ್ತು ತಾಂತ್ರಿಕ ಪ್ರಗತಿಗೆ ವೇಗ ದೊರೆಯಲಿದೆ ಎಂದರು.
ಸಂಶೋಧನೆ ಮತ್ತು ನಾವೀನ್ಯತೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ. ಕೈಗಾರಿಕೆಗಳು ಹಾಗೂ ವಿಶ್ವವಿದ್ಯಾಲಯಗಳು ಜಂಟಿಯಾಗಿ ಅತ್ಯಾಧುನಿಕ ಸಂಶೋಧನಾ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು. ಭಾರತ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚಂದಾದಾರಿಕೆ’ (ONOS) ಉಪಕ್ರಮವು ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಂಶೋಧಕರಿಗೆ ವಿದ್ವತ್ಪೂರ್ಣ ಪ್ರಕಟಣೆಗಳು ಹಾಗೂ ಸಂಶೋಧನಾ ಸಾಹಿತ್ಯ ಲಭ್ಯವಾಗುವಂತೆ ಮಾಡುವ ಮೂಲಕ ಸಂಶೋಧನೆಯ ಗುಣಮಟ್ಟ ಹೆಚ್ಚಿಸಲು ನೆರವಾಗಲಿದೆ ಎಂದು ಹೇಳಿದರು.
ಗುಣಮಟ್ಟದ ಶಿಕ್ಷಣ, ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿಗೆ ಸಿಯುಕೆ ಬದ್ಧವಾಗಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಲ್ಲಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಸ್ತು, ವೃತ್ತಿಪರ ನೈತಿಕತೆ ಮತ್ತು ನಿರಂತರ ಕಲಿಕೆಯ ಮನೋಭಾವ ಬೆಳೆಸಿಕೊಳ್ಳಬೇಕು. ವಿಕಸಿತ ಭಾರತ ನಿರ್ಮಾಣಕ್ಕೆ ವಿಶ್ವವಿದ್ಯಾಲಯಗಳು, ಕೈಗಾರಿಕೆಗಳು, ಉದ್ಯಮಿಗಳು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಸಮಾವೇಶದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್, ಐಐಪಿಎಂ ನಿರ್ದೇಶಕ ಡಾ. ಸೆಂಥಿಲ್ ವಿನಾಯಗಂ, ಕರ್ನಾಟಕ ಪ್ರಾದೇಶಿಕ ನಬಾರ್ಡ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ. ಸುರೇಂದ್ರ ಬಾಬು, ಸಿಯುಕೆ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ. ಎ.ಎನ್. ವಿಜಯಕುಮಾರ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.






