ಕಲಬುರಗಿ | ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ರದ್ದುಪಡಿಸುವಂತೆ ಎಐಡಿಎಸ್‌ಒ ಆಗ್ರಹ

ಕಲಬುರಗಿ: ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ರದ್ದುಪಡಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (AIDSO) ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಬಳಿಕ ಮಾತನಾಡಿದ ಸಂಘಟನೆಯ ಮುಖಂಡರು, 2020-20ನೇ ಸಾಲಿನಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್.ಆರ್.ಐ ಕೋಟಾವನ್ನು ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸುತ್ತೇವೆ. ಇದು ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಈಗಾಗಲೇ ಅಖಿಲ ಭಾರತ ಕೋಟಾದಡಿಯಲ್ಲಿ 15 ಪ್ರತಿಶತ ನೀಡಲಾಗುತ್ತದೆ. ಅದರೊಳಗೆ ಮತ್ತೆ 15 ಪ್ರತಿಶತ ಎನ್.ಆರ್.ಐ ಗೆ ಮೀಸಲಿಟ್ಟರೆ ಬೆರಳಣಿಕೆಯಷ್ಟು ಸ್ಥಾನಗಳು ನಮ್ಮ ವಿದ್ಯಾರ್ಥಿಗಳ ನೀಡಲಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.
ಶ್ರೀಮಂತ ಎನ್.ಆರ್.ಐ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಅವಕಾಶವನ್ನು ರಾಜ್ಯ ಸರ್ಕಾರವು ಮೊಟಕುಗೊಳಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಸದರಿ ಎನ್.ಆರ್.ಐ ಕೋಟಾಕ್ಕೆ ಮೀಸಲಿಡುತ್ತಿರುವುದನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿಗಳಾದ ತುಳಜರಾಮ, ಜಿಲ್ಲಾ ಉಪಾಧ್ಯಕ್ಷರಾದ ಪ್ರೀತಿ ದೊಡ್ಡಮನಿ, ಗೋವಿಂದ ಯಳವಾರ, ನಾಗರಾಜಿ ರಾವೂರ್, ಜಿಲ್ಲಾ ಸಮಿತಿ ಸದಸ್ಯರಾದ ಯುವರಾಜ, ರಾಹುಲ್, ಸಿದ್ದಾರ್ಥ್, ಸ್ಫೂರ್ತಿ, ಸಂಪತಿ ಸೇರಿದಂತೆ ಮತ್ತಿತರರು ಇದ್ದರು.







