Kalaburagi | ನಿರುದ್ಯೋಗಿ ಯುವಜನರ ಕುರಿತು ಮುಖ್ಯ ನ್ಯಾಯಮೂರ್ತಿಗಳ ಹೇಳಿಕೆಗೆ ಎಐಡಿವೈಒ ಖಂಡನೆ

ಜಗನ್ನಾಥ ಎಸ್.ಎಚ್.
ಕಲಬುರಗಿ: ನಿರುದ್ಯೋಗಿ ಯುವಜನರ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿರುವ ಹೇಳಿಕೆ ಅವಹೇಳನಕಾರಿ ಹಾಗೂ ಸಂವೇದನಾರಹಿತವಾಗಿದೆ ಎಂದು ಆರೋಪಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಒ) ಕಲಬುರಗಿ ಜಿಲ್ಲಾ ಘಟಕ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಎಐಡಿವೈಒ ಜಿಲ್ಲಾ ಅಧ್ಯಕ್ಷ ಜಗನ್ನಾಥ ಎಸ್.ಎಚ್., ನಿರುದ್ಯೋಗಿ ಯುವಕರನ್ನು ‘ಜಿರಳೆಗಳು’ ಹಾಗೂ ‘ಪರಾವಲಂಬಿಗಳು’ ಎಂದು ಹೋಲಿಸಿರುವುದು ಯುವ ಸಮುದಾಯದ ಆತ್ಮಗೌರವಕ್ಕೆ ಧಕ್ಕೆ ತರುವಂತದ್ದಾಗಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ದಿನೇದಿನೇ ಗಂಭೀರವಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಜನರಿಗೆ ಉದ್ಯೋಗ ನೀಡುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಅವರು ಆರೋಪಿಸಿದ್ದಾರೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಉದ್ಯೋಗ ಭರವಸೆಗಳು ಈಡೇರಿಲ್ಲ ಎಂದು ಟೀಕಿಸಿದ್ದಾರೆ.
ಕರ್ನಾಟಕ ಸೇರಿದಂತೆ ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರ ಅವ್ಯವಸ್ಥೆಗಳ ವಿರುದ್ಧ ಪ್ರತಿಭಟನೆ ನಡೆಸಿದ ಉದ್ಯೋಗಾಕಾಂಕ್ಷಿಗಳ ಮೇಲೆ ಸರ್ಕಾರಗಳು ದಮನಾತ್ಮಕ ಕ್ರಮ ಕೈಗೊಂಡಿರುವುದು ವಿಷಾದಕರ ಸಂಗತಿ ಎಂದು ಹೇಳಿದ್ದಾರೆ.
ಪ್ರಸ್ತುತ ದೇಶದಲ್ಲಿ ನಿರುದ್ಯೋಗದ ಪ್ರಮಾಣ ಸ್ವಾತಂತ್ರ್ಯೋತ್ತರ ಅವಧಿಯಲ್ಲೇ ಅತ್ಯಧಿಕ ಮಟ್ಟದಲ್ಲಿದ್ದು, ಸರ್ಕಾರಗಳ ವೈಫಲ್ಯವನ್ನು ಪ್ರಶ್ನಿಸುವ ಬದಲು ನಿರುದ್ಯೋಗಿ ಯುವಜನರನ್ನು ಗುರಿಯಾಗಿಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ, ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವೇದಿಕೆಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವ ಯುವಜನರು, ಮಾನವ ಹಕ್ಕು ಹೋರಾಟಗಾರರು ಮತ್ತು ಮಾಧ್ಯಮದವರ ವಿರುದ್ಧವೂ ಟೀಕೆ ವ್ಯಕ್ತವಾಗುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಮುಖ್ಯ ನ್ಯಾಯಮೂರ್ತಿಗಳು ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿರುವ ಎಐಡಿವೈಒ, ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿರುವ ಜನವಿರೋಧಿ ನೀತಿಗಳ ವಿರುದ್ಧ ನಿರುದ್ಯೋಗಿ ಯುವಕರು ಸಂಘಟಿತ ಹೋರಾಟ ಮುಂದುವರೆಸಬೇಕೆಂದು ತಿಳಿಸಿದೆ.






