Kalaburagi | ಕ್ಲಸ್ಟರ್ ಕಿಚನ್ ವ್ಯವಸ್ಥೆ ಕೈಬಿಡಲು ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಧರಣಿ

ಕಲಬುರಗಿ : ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ‘ಕ್ಲಸ್ಟರ್ ಕಿಚನ್’ (ಕೇಂದ್ರೀಕೃತ ಅಡುಗೆ ಮನೆ) ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು ತಕ್ಷಣವೇ ಕೈಬಿಡಬೇಕು ಹಾಗೂ ಬಿಸಿಯೂಟ ತಯಾರಿಕೆಯ ಸಂಪೂರ್ಣ ಜವಾಬ್ದಾರಿಯನ್ನು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗೇ ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ನೇತೃತ್ವದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಲಾಯಿತು.
ನಗರದ ಡಾ. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಘದ ಕಾರ್ಯಕರ್ತರು, ಯಾವುದೇ ಕಾರಣಕ್ಕೂ ಕ್ಲಸ್ಟರ್ ಕಿಚನ್ ಪದ್ಧತಿಯನ್ನು ಜಾರಿಗೆ ತರಬಾರದು ಹಾಗೂ ಈಗಿರುವ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದರು. ಅಡುಗೆ ಸಿಬ್ಬಂದಿಯ ಮೂಲಕವೇ ಬಿಸಿಯೂಟ ತಯಾರಿಸುವ ವ್ಯವಸ್ಥೆಯನ್ನು ಉಳಿಸಿಕೊಂಡು, ಅವರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಅಡುಗೆ ಸಿಬ್ಬಂದಿಯ ಮಾಸಿಕ ಗೌರವಧನ ಹೆಚ್ಚಿಸಬೇಕು, ಬಾಕಿ ಇರುವ ಗೌರವಧನವನ್ನು ತಕ್ಷಣ ಪಾವತಿಸಬೇಕು ಹಾಗೂ ಸಿಬ್ಬಂದಿಯ ಹಿತದೃಷ್ಟಿಯಿಂದ ಅಗತ್ಯ ಕಲ್ಯಾಣ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂಬಂಧ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ (ಸಿಇಒ) ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕ್ಲಸ್ಟರ್ ಕಿಚನ್ ಪದ್ಧತಿ ಜಾರಿಯಾದರೆ ಸ್ಥಳೀಯವಾಗಿ ದುಡಿಯುತ್ತಿರುವ ಬಡ ಅಡುಗೆ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ಬರಲಿದೆ. ಅಲ್ಲದೆ, ಪರೋಕ್ಷವಾಗಿ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಇದರಲ್ಲಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಂಘದ ಕಲಬುರಗಿ ಜಿಲ್ಲಾ ಅಧ್ಯಕ್ಷೆ ವಿಜಯಲಕ್ಷ್ಮಿ ಹಿರೇಮಠ, ಕಾರ್ಯದರ್ಶಿ ಸಂಗೀತಾ ವಿ. ಗುತ್ತೇದಾರ, ಖಜಾಂಚಿ ರೇಖಾ ರಂಗನ ಸೇರಿದಂತೆ ವಿವಿಧ ತಾಲೂಕುಗಳ ಪದಾಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.






