ಕಲಬುರಗಿ | ಬೋರ್‌ವೆಲ್ ಕಾಮಗಾರಿಗೆ ತಡೆ ಆರೋಪ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿ : ಅಲೆಮಾರಿ ಜನಾಂಗದ ನಿವಾಸಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಮಹಾನಗರ ಪಾಲಿಕೆಯಿಂದ ಕೈಗೆತ್ತಿಕೊಳ್ಳಲಾಗಿದ್ದ ಬೋರ್‌ವೆಲ್ ಕಾಮಗಾರಿಯನ್ನು ಕೆಲ ಅಧಿಕಾರಿಗಳು ತಡೆದಿದ್ದಾರೆ ಎಂದು ಆರೋಪಿಸಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ರಾಮನಗರ ಭಾಗ-2ರಲ್ಲಿ ಅಲೆಮಾರಿ ಜನಾಂಗದ ನೂರಾರು ಕುಟುಂಬಗಳು ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆಯ ನಡುವೆ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ನಿವಾಸಿಗಳು ಹಾಗೂ ಸ್ಲಂ ಜನಾಂದೋಲನ ಸಂಘಟನೆಯ ಮುಖಂಡರು ಹಲವು ವರ್ಷಗಳಿಂದ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯ ಮಾಡಿದ್ದಾರೆ.
ಪ್ರತಿಭಟನೆ ಹಾಗೂ ಮನವಿಗಳಿಗೆ ಸ್ಪಂದಿಸಿದ ಮಹಾನಗರ ಪಾಲಿಕೆಯ ಅಧಿಕಾರಿಗಳು ಬೋರ್ ವೆಲ್ ಕಾಮಗಾರಿ ಆರಂಭಿಸಿದ್ದರು. ಆದರೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಗ್ರಾಮೀಣ ಪೊಲೀಸ್ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೋರ್‌ವೆಲ್ ಕೊರೆಯುವ ಕಾಮಗಾರಿಯನ್ನು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಮನಗರ ಭಾಗ-2ರ ಅಲೆಮಾರಿ, ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗದ ಜನರಿಗೆ ಮಂಜೂರಾಗಿರುವ ಕುಡಿಯುವ ನೀರಿನ ಯೋಜನೆಯನ್ನು ತಡೆಯುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಪಾಲಿಕೆಯ ಮೂಲಕ ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಬೋರವೆಲ್ ಕಾಮಗಾರಿಯನ್ನು ಪುನರಾರಂಭಿಸುವಂತೆ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕದ ಅಧ್ಯಕ್ಷೆ ಗೌರಮ್ಮ ಮಾಕಾ, ಕಾರ್ಯದರ್ಶಿ ಶರಣು ಕಣ್ಣಿ, ಸಂಚಾಲಕಿ ರೇಣುಕಾ ಸರಡಗಿ, ಖಜಾಂಚಿ ಸುನೀತಾ ಕೊಳ್ಳೂರ, ಸ್ಲಂ ಮುಖಂಡರಾದ ಶರಣು ಹಂಗರಗಿ, ಮರೇಪ್ಪ ಭೋವಿ ಉಪಸ್ಥಿತರಿದ್ದರು.






