Kalaburagi | ವಕ್ಫ್ ಜಮೀನು ಖಾಸಗಿ ವ್ಯಕ್ತಿಯ ಹೆಸರಿಗೆ ವರ್ಗಾವಣೆ ಆರೋಪ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿ: ತಾಲೂಕಿನ ತಾಡತೆಗನೂರ ಗ್ರಾಮದ ಸರ್ವೆ ನಂ. 7ರ ಹಿಸ್ಸಾ 01ರ ವಕ್ಫ್ ಮಂಡಳಿಗೆ ಸೇರಿದ ಜಮೀನನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ವರ್ಗಾವಣೆ ಮಾಡಿರುವುದು ಕಾನೂನುಬಾಹಿರವಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಜಮೀನನ್ನು ಮರಳಿ ವಕ್ಫ್ ಮಂಡಳಿಗೆ ವರ್ಗಾಯಿಸಬೇಕು ಎಂದು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಮಾಕಾಂತ ವಿ. ಪೂಜಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಸದರಿ ಜಮೀನನ್ನು ಸುಮಲತಾ ಐ. ವಳಕೇರಿ ಅವರ ಹೆಸರಿಗೆ ವರ್ಗಾವಣೆ ಮಾಡಲಾಗಿದೆ. ವಕ್ಫ್ ಮಂಡಳಿಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ವರ್ಗಾವಣೆ ಮಾಡಿರುವುದು ಕಾನೂನುಬಾಹಿರವಾಗಿದೆ. ಈ ವರ್ಗಾವಣೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಜಮೀನನ್ನು ಮರಳಿ ವಕ್ಫ್ ಮಂಡಳಿಗೆ ಹಸ್ತಾಂತರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಮನವಿಗೆ ಸ್ಪಂದಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಮಾಕಾಂತ ವಿ. ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡ ನಾಗಪ್ಪ ಟೈಗರ, ಸತೀಶ ರಾಠೋಡ, ಸಚೀನ ರಿರ್ಲನ್, ಮಲ್ಲಿಕಾರ್ಜುನ ಆಲಗೂಡ, ಮನೋಜ ನಾಟಕಾರ ಹಾಗೂ ಸಂತೋಷ ಗಡಸೆ ಉಪಸ್ಥಿತರಿದ್ದರು.




