Kalaburagi | ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ಸಂಸ್ಕಾರವೂ ಮುಖ್ಯ: ಶಾಸಕ ಬಿ.ಆರ್.ಪಾಟೀಲ್

ಕಲಬುರಗಿ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸಂಸ್ಕಾರವನ್ನು ಕಲಿಯುವುದು ಬಹಳ ಮುಖ್ಯ ಎಂದು ಆಳಂದ ಮತಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಹೇಳಿದರು.
ನಗರದ ಶರಣಬಸವೇಶ್ವರ ಕಲಾ ಪದವಿ ಮಹಾವಿದ್ಯಾಲಯದಲ್ಲಿ ಮಂಗಳವಾರ ವಿದ್ಯಾರ್ಥಿ ಕಲಾನಿಕಾಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಸ್ತು, ಶ್ರಮ ಹಾಗೂ ಸಂಸ್ಕಾರವನ್ನು ಬೆಳೆಸಿಕೊಳ್ಳುವುದು ಅಗತ್ಯ. ಇದನ್ನು ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ ಕಲಿಸಿಕೊಡುತ್ತಿದೆ ಎಂದರು.
ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು, ಅನ್ಯಾಯವನ್ನು ಖಂಡಿಸುವ ಹೋರಾಟದ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿಯೊಬ್ಬ ಯುವಜನತೆಯೂ ಜಲ, ಜಮೀನು ಹಾಗೂ ಜೀವನದ ಮಹತ್ವವನ್ನು ಅರಿತುಕೊಂಡು ಪರಿಸರದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಗೌರವ ಅತಿಥಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಗುರಿಯನ್ನು ಹೊಂದಿರಬೇಕು. ಆ ಗುರಿಯನ್ನು ತಲುಪಲು ನಿರಂತರವಾಗಿ ಶ್ರಮಿಸಬೇಕು. ವಿದ್ಯೆ ಎಂಬುದು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ಸಂಸ್ಕಾರ ಕಲಿಸುವ ರಾಜಮಾರ್ಗವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಸುರೇಶಕುಮಾರ ನಂದಗಾಂವ ಮಾತನಾಡಿದರು.
ಪ್ರಾಧ್ಯಾಪಕ ಡಾ. ಶಿವರಾಜ ಶಾಸ್ತ್ರಿ ಹೇರೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕು. ಸಾಯಿರಾಜ ಸ್ವಾಗತಿಸಿದರು. ಫಾಯಿಜಾ ಖಾನುಂ ಮತ್ತು ಪ್ರೇಮರಂಗ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಸಲಹೆಗಾರ್ತಿ ಡಾ. ಆರತಿ ರಾಮಚಂದ್ರ ವಂದಿಸಿದರು. ಸಂಗೀತ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.






