ಕಲಬುರಗಿ | ಬಾಲಕರಿಗೆ ಹೊಯ್ಸಳ, ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ "ಹೊಯ್ಸಳ" ಮತ್ತು ಬಾಲಕಿಯರಿಗೆ "ಕೆಳದಿ ಚೆನ್ನಮ್ಮ" ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಪ್ರಕರಣವು 01-08-2024 ರಿಂದ 31-07-2025ರ ವರೆಗೆ ನಡೆದಿರಬೇಕು. ದಿನಾಂಕ:01-08-2007ರಂದು ಹಾಗೂ ನಂತರದ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000 ರೂ. ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತವೆ.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1,00,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.
ಇಚ್ಛೆಯುಳ್ಳ ಅರ್ಹ ಮಕ್ಕಳು/ವ್ಯಕ್ತಿಗಳು ನಿಗದಿತ ಅರ್ಜಿ ನಮೂನೆಗಳನ್ನು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಅವಶ್ಯಕ ದಾಖಲಾತಿಗಳೊಂದಿಗೆ 2025ರ ಅಕ್ಟೋಬರ್ 16 ರ ಸಂಜೆ 5 ಗಂಟೆಯೊಳಗಾಗಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.







