Kalaburagi | ಕೆಕೆಆರ್‌ಡಿಬಿ ಮಂಡಳಿಯಲ್ಲಿ ತಾಂತ್ರಿಕ ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ : ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯದಲ್ಲಿ ಗೌರವಧನದ ಆಧಾರದ ಮೇಲೆ ಓರ್ವ ತಾಂತ್ರಿಕ ಸಲಹೆಗಾರರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮಂಡಳಿಯ ಉಪಕಾರ್ಯದರ್ಶಿಗಳು ತಿಳಿಸಿದ್ದಾರೆ.
ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 90 ಸಾವಿರ ರೂ. ಗೌರವಧನ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದ ಮುಖ್ಯ ಇಂಜಿನಿಯರ್ ಹುದ್ದೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರಬೇಕು.
ಅಭ್ಯರ್ಥಿಗಳು ನಗರ ಮೂಲಸೌಕರ್ಯ ಯೋಜನೆಗಳಲ್ಲಿ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಜೊತೆಗೆ ಗ್ರಾಮೀಣ ನೀರು ಸರಬರಾಜು ಯೋಜನೆಗಳು, ಗುಣನಿಯಂತ್ರಣ ವಿಭಾಗದಲ್ಲಿ ಗುಣಮಟ್ಟ ನಿರ್ಧಾರ ಕಾರ್ಯ, ವಿವಿಧ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆ, ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ಅರ್ಜಿದಾರರು 65 ವರ್ಷಕ್ಕಿಂತ ಕಡಿಮೆ ವಯೋಮಿತಿಯನ್ನು ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ತಮ್ಮ ರೆಸ್ಯೂಮ್ ಅನ್ನು ಇದೇ ಮೇ 25ರೊಳಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪಕಾರ್ಯದರ್ಶಿಗಳು, ಕಲಬುರಗಿ ಇವರಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.




