ಕಲಬುರಗಿ | ಕೃಷಿ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ ; 7 ಕೆ.ಜಿ. ಗಾಂಜಾ ಜಪ್ತಿ

ಕಲಬುರಗಿ: ಕಮಲಾಪುರ ತಾಲೂಕಿನ ಸೊಂತ ಗ್ರಾಮದ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು, ಸುಮಾರು 7 ಕೆ.ಜಿ. ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಸೊಂತ ಗ್ರಾಮದ ಮೆರಾಜ್ ಸಿರಾಜ್ ಪಟೇಲ್ ಕೇರಿ(26) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಸೊಂತ ಗ್ರಾಮದ ಹೊಲವೊಂದರಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಹಾಗೂ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಕಮಲಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಸುಖಾನಂದ ಸಿಂಗೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹುಸೇನ್ ಪಟೇಲ್, ಬದ್ದು ರಾಥೋಡ್, ಸಯ್ಯದ್ ಶಕೀಲ್, ಗುರುನಾಥ ರೆಡ್ಡಿ ಸೇರಿದಂತೆ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಆರೋಪಿಯನ್ನು ಬಂಧಿಸಿ ಗಾಂಜಾ ಬೆಳೆಯನ್ನು ವಶಕ್ಕೆ ಪಡೆದರು.
ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.




