ಕಲಬುರಗಿ| ಮೂವರು ಮನೆಗಳ್ಳರ ಬಂಧನ: 5.50 ಲಕ್ಷ ರೂ. ಮೌಲ್ಯದ ಸ್ವತ್ತು ಜಪ್ತಿ

ಕಲಬುರಗಿ: ರಟಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೆಂಗಟಾ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ 5.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಕಾಳಗಿ ಪಟ್ಟಣದ ಶೇರ್ ಆಲಿ (31), ಅಬ್ದುಲ್ ವಾಜೀದ್ (22) ಹಾಗೂ ಈರ್ಫಾನ್ ಸಾಬ್ (30) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಗುರುವಾರ ವಶಕ್ಕೆ ಪಡೆದ ಪೊಲೀಸರು ಅವರಿಂದ 33 ಗ್ರಾಂ ಚಿನ್ನ, 30 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಚೆಂಗಟಾ ಗ್ರಾಮದ ರವಿಪ್ರಕಾಶ ಹಜೇಪ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಅವರ ಮನೆಯ ಅಲಮಾರಿಯಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳ್ಳರು ಕಳ್ಳತನ ಮಾಡಿದ್ದರು. ಕಳ್ಳತನವಾದ ಆಭರಣಗಳ ಒಟ್ಟು ಮೌಲ್ಯ ಸುಮಾರು 11.71 ಲಕ್ಷ ರೂ. ಎಂದು ಅಂದಾಜಿಸಲಾಗಿತ್ತು. ಈ ಕುರಿತು ಆಗಸ್ಟ್ 31ರಂದು ನೀಡಿದ ದೂರಿನ ಆಧಾರದ ಮೇಲೆ ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಗಾಗಿ ಚಿಂಚೋಳಿ ಡಿವೈಎಸ್‌ಪಿ ಅವರ ಮಾರ್ಗದರ್ಶನದಲ್ಲಿ ಸುಲೇಪೇಟ ಸಿಪಿಐ ಕೃಷ್ಣಕುಮಾರ ಹಾಗೂ ರಟಕಲ್ ಪಿಎಸ್‌ಐ ಶೀಲಾದೇವಿ ಅವರ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ತಂಡವು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.
ಪ್ರಕರಣವನ್ನು ಭೇದಿಸುವಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿ ಪ್ರಶಂಸನಾ ಪತ್ರ ನೀಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.






