ಕಲಬುರಗಿ | ಜೂ. 5ರಂದು "ಹಸಿರು ಪಥಕ್ಕೆ" ಚಾಲನೆ ಹಿನ್ನೆಲೆ: ಕಾರ್ಯಕ್ರಮ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸರೀಕರಣ ಹೆಚ್ಚಿಸುವ ಮಹತ್ವಕಾಂಕ್ಷೆಯೊಂದಿಗೆ ಜುಲೈ 5ರಂದು ಅರಣ್ಯ ಇಲಾಖೆಯ ವನಮಹೋತ್ಸವ ರಾಜ್ಯ ಮಟ್ಟದ ಕಾರ್ಯಕ್ರಮ ಮತ್ತು "ಹಸಿರು ಪಥ" ಯೋಜನೆಗೆ ಕಲಬುರಗಿಯಲ್ಲಿ ಚಾಲನೆ ನೀಡಲಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರದ ಪಿ.ಡಿ.ಎ ಕಾಲೇಜು ಹಿಂಭಾಗದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲಿಸಿ ಅಂತಿಮ ಪೂರ್ವಸಿದ್ಧತಾ ಕಾರ್ಯಗಳನ್ನು ವೀಕ್ಷಿಸಿದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಪ್ರದೇಶದ ಸಚಿವರು, ಶಾಸಕರು ಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಆಗಮಿಸುವುದರಿಂದ, ಎಲ್ಲಿಯೂ ಶಿಷ್ಟಾಚಾರದಲ್ಲಿ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು. ವಿಶೇಷವಾಗಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದ ಅವರು, ಸೂಕ್ತ ಪೊಲೀಸ್ ಭದ್ರತೆ ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಮೊದಲ ಬಾರಿಗೆ ವನಮಹೋತ್ಸವ ರಾಜ್ಯ ಮಟ್ಟದ ಕಾರ್ಯಕ್ರಮ ಕಲಬುರಗಿಯಲ್ಲಿ ಆಯೋಜಿಸಲಾಗಿದೆ. ಕಳೆದ ಬಾರಿ ಬೀದರ್ ಜಿಲ್ಲೆಯಲ್ಲಿ ಆಯೋಜಿಸಲಾಗಿತ್ತು. ಇನ್ನು ಇದೇ ವೇದಿಕೆಯಲ್ಲಿ ಹಸಿರು ಪಥ, ಮನೆಗೊಂದು ಮರ, ಉದ್ಯಾನವನ ಅಭಿವೃದ್ಧಿ, ಕೆರೆ-ಕಲ್ಯಾಣಿ ಪುನಶ್ಚೇತನದಂತಹ ಯೋಜನೆಗಳಿಗೆ ಚಾಲನೆ ನೀಡುತ್ತಿರುವುದರಿಂದ ಹಸಿರು ಕಲಬುರಗಿಗೆ ಬಹುದೊಡ್ಡ ಕೊಡುಗೆಯಾಗಿದೆ. ಹೀಗಾಗಿ ಕಾರ್ಯಕ್ರಮ ಯಶಸ್ಸಿಗೆ ಎಲ್ಲರು ಶ್ರಮಿಸಬೇಕೆಂದು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಕಲಬುರಗಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿ.ಸಿ.ಎಫ್ ಸುಮಿತ್ ಪಾಟೀಲ ಇದ್ದರು.







