Kalaburagi | ಬರ ಪರಿಸ್ಥತಿ ಸಮರ್ಥವಾಗಿ ಎದರಿಸಲು ಸಜ್ಜಾಗಿ: ಸುಬೋಧ ಯಾದವ

ಕಲಬುರಗಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಬರದ ಛಾಯೆ ಆವರಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಈಗಿನಿಂದಲೇ ಸಜ್ಜಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಬೋಧ್ ಯಾದವ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮೊದಲ ಆದ್ಯತೆಯಾಗಬೇಕು. ಅಗತ್ಯ ಪ್ರಮಾಣದ ಮೇವು ದಾಸ್ತಾನು ಮಾಡಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಕೆಲ ಮಳೆಮಾಪನ ಕೇಂದ್ರಗಳು ಕಾರ್ಯನಿರ್ವಹಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅವುಗಳನ್ನು ತಕ್ಷಣ ದುರಸ್ತಿಪಡಿಸುವಂತೆ ಸೂಚಿಸಿದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಟ್ಯಾಂಕರ್, ಬಾವಿ ಹಾಗೂ ಕೊಳವೆಬಾವಿಗಳ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ವಾಡಿಕೆಯ 168.1 ಮಿ.ಮೀ. ಮಳೆಯ ಬದಲಿಗೆ ಕೇವಲ 80.8 ಮಿ.ಮೀ. ಮಳೆಯಾಗಿದೆ. ಇದರಿಂದ ಬಿತ್ತನೆ ಗುರಿಯ ಪೈಕಿ ಕೇವಲ 2.72 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಪೂರ್ಣಗೊಂಡಿದೆ ಎಂದರು.
ಬೆಳೆ ವಿಮೆ ಕುರಿತು ವಿಶೇಷ ಒತ್ತು ನೀಡಿದ ಸುಬೋಧ್ ಯಾದವ್, ಕಳೆದ ವರ್ಷ ರೈತರಿಗೆ 650 ಕೋಟಿ ರೂ. ಬೆಳೆ ವಿಮೆ ಪರಿಹಾರ ದೊರೆತಿದೆ. ಈ ವರ್ಷವೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಕೃಷಿ ಇಲಾಖೆಗೆ ಸೂಚಿಸಿದರು.
ಗ್ರಾಮೀಣ ಭಾಗದಲ್ಲಿ ಪ್ರತಿ ವರ್ಷ ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಗ್ರಾಮಗಳಿಗೆ ತಾತ್ಕಾಲಿಕ ಪರಿಹಾರವಲ್ಲ, ಶಾಶ್ವತ ಯೋಜನೆ ರೂಪಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಕೆಕೆಆರ್‌ಡಿಬಿ ಅನುದಾನದಡಿ ನಡೆಯುತ್ತಿರುವ ಕಾಮಗಾರಿಗಳ ವಿಳಂಬದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಎರಡು ವರ್ಷವಾದರೂ ಆರಂಭವಾಗದ ಕಾಮಗಾರಿಗಳ ಕುರಿತು ಸಂಬಂಧಿತ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಾಮಗಾರಿಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ ವೇಗಗೊಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಜಿಲ್ಲಾ ಪಂಚಾಯತ್ ಸಿ.ಇ.ಓ ರಾಹುಲ್ ಸಂಕನುರ್, ಸಹಾಯಕ ಆಯುಕ್ತರಾದ ಸಾಹಿತ್ಯ ಆಲದಕಟ್ಟಿ, ಪ್ರೊಬೇಷನರ್ ಐ.ಎ.ಎಸ್ ಅಧಿಕಾರಿ ಶಿಖರ್ ಮೋಘಾ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಸಂತೋಷ ಇನಾಂದಾರ ಸೇರಿದಂತೆ ಸಣ್ಣ ನೀರಾವರಿ, ಕೆ.ಎನ್.ಎನ್.ಎಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.






