ಕಲಬುರಗಿ | ದ್ವೇಷ ಭಾಷಣ, ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರುದ್ಧ ಬಿಜೆಪಿ ಪ್ರತಿಭಟನೆ

ಕಲಬುರಗಿ: ರಾಜ್ಯ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಜಾರಿಗೆ ತರುತ್ತಿರುವ ವಿಧೇಯಕವು ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಮಾಡುತ್ತದೆ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಈ ವೇಳೆ ಮಾತನಾಡಿದ ಮಾಜಿ ಸಂಸದ ಉಮೇಶ್ ಜಾಧವ್, ರಾಜ್ಯ ಸರ್ಕಾರ ತರುತ್ತಿರುವ ಕಾಯ್ದೆ ಜನವಿರೋಧಿಯಾಗಿದೆ, ಈ ಕಾಯ್ದೆಯಿಂದಾಗಿ ಪತ್ರಕರ್ತರನ್ನು ಜೈಲಿಗೆ ಕಳುಹಿಸುವ ಹುನ್ನಾರ ನಡೆಯುತ್ತಿದೆ, ಅವರ ಮಾತು ಕೇಳದ ಅವರದೇ ಶಾಸಕ, ಸಂಸದರನ್ನು ಅಮಾನತ್ತುಗೊಳಿಸುವ ಒಂದು ಯೋಜನೆ ರೂಪಿಸಲಾಗಿದೆ ಎಂದರು.
ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಮಾತನಾಡಿದರು.
ಪ್ರತಿಭಟನೆಯಲ್ಲಿ ಶಾಸಕ ಅವಿನಾಶ್ ಜಾಧವ್, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ, ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಅಮರನಾಥ್ ಪಾಟೀಲ್, ಸಂತೋಷ್ ಹಾದಿಮನಿ, ಆನಂದ ಪಾಟೀಲ, ಮಹಾದೇವ ಬೆಳಮಗಿ, ಶಶಿಕಲಾ ತೆಂಗಳಿ ಸೇರಿದಂತೆ ಹಲವರಿದ್ದರು.







