Kalaburagi | ಬಿಜೆಪಿ ಪ್ರತಿಭಟನೆಯಲ್ಲಿ ಜಿಲ್ಲಾಧಿಕಾರಿಯತ್ತ ಬಾಟಲಿ ಎಸೆತ

ಕಲಬುರಗಿ : ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಬುಧವಾರ ನಡೆಸಿದ ಪ್ರತಿಭಟನೆ ವೇಳೆ ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರತ್ತ ನೀರಿನ ಪ್ಲಾಸ್ಟಿಕ್ ಬಾಟಲಿ ಎಸೆದು ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ.
ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಶಾಸಕರು, ಮಾಜಿ ಶಾಸಕರು ಹಾಗೂ ಮಾಜಿ ಸಂಸದರು ಸೇರಿದಂತೆ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಲು ಬಂದ ಸಂದರ್ಭದಲ್ಲಿ ಅವರತ್ತ ನೀರಿನ ಪ್ಲಾಸ್ಟಿಕ್ ಬಾಟಲಿ ಎಸೆದಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಇದೇ ಪ್ರತಿಭಟನೆಗೆ ಸಂಬಂಧಿಸಿದ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ ಅವರು ಸ್ಕೂಟರ್ ಸವಾರನೊಬ್ಬನ ಹೆಲ್ಮೆಟ್ ಒಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಹಕ್ಕಾಗಿದ್ದರೂ, ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುವುದು, ಅನುಚಿತವಾಗಿ ವರ್ತಿಸುವುದು ಹಾಗೂ ಸಾರ್ವಜನಿಕ ಆಸ್ತಿಗೆ ಅಥವಾ ವ್ಯಕ್ತಿಗಳಿಗೆ ಹಾನಿ ಮಾಡುವುದು ಎಷ್ಟರ ಮಟ್ಟಿಗೆ ಸಮಂಜಸ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಪ್ರತಿಭಟನೆಯ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಪ್ರವೃತ್ತಿಯನ್ನು ಯಾವುದೇ ರಾಜಕೀಯ ಪಕ್ಷವೂ ಬೆಂಬಲಿಸಬಾರದು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕರಾದ ಬಸವರಾಜ ಮತ್ತಿಮಡು, ಅವಿನಾಶ್ ಜಾಧವ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಅಶೋಕ್ ಬಗಲಿ, ನಗರಾಧ್ಯಕ್ಷ ಚಂದು ಪಾಟೀಲ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ಹಾಗೂ ಮಾಜಿ ಸಂಸದ ಉಮೇಶ್ ಜಾಧವ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಘಟನೆಯ ಕುರಿತು ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ.
ಈ ಕುರಿತು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರನ್ನು ಸಂಪರ್ಕಿಸಿದಾಗ, "ಪ್ರತಿಭಟನೆ ಜಾಗದಲ್ಲಿ ಬಾಟಲಿ ನನ್ನ ಮೇಲೆ ಬಿದ್ದಿಲ್ಲ. ಮನವಿ ಪತ್ರ ಸ್ವೀಕರಿಸಿದ್ದೇನೆ" ಎಂದು ಹೇಳಿದ್ದಾರೆ.
ಇನ್ನು, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರಿಗೆ ಸಂಪರ್ಕಿಸಿದಾಗ, ವೀಡಿಯೊದಲ್ಲಿ ಬಾಟಲಿ ಎಸೆದಿರುವುದು ಕಾಣಿಸಿದೆ. ಮತ್ತೊಮ್ಮೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ






