Kalaburagi | ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅಸ್ತು
ಅಂತರರಾಷ್ಟ್ರೀಯ ಪಾರಂಪರಿಕ, ಸಾಂಸ್ಕೃತಿಕ ಕೇಂದ್ರವಾಗಿ ಅಭಿವೃದ್ಧಿಗೆ ಕ್ರಮ

ಕಲಬುರಗಿ : ಚಿತ್ತಾಪುರ ತಾಲ್ಲೂಕಿನ ಐತಿಹಾಸಿಕ ಸನ್ನತಿಯನ್ನು ಅಂತರರಾಷ್ಟ್ರೀಯ ಪಾರಂಪರಿಕ, ಸಾಂಸ್ಕೃತಿಕ ಹಾಗೂ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಬಂಧಿಸಿದ 2026ನೇ ಸಾಲಿನ ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸನ್ನತಿಯ ಐತಿಹಾಸಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪುರಾತತ್ವ ಮಹತ್ವವನ್ನು ವಿಶ್ವಮಟ್ಟದಲ್ಲಿ ಪರಿಚಯಿಸುವುದರ ಜೊತೆಗೆ, ಪಾರಂಪರಿಕ ತಾಣಗಳ ಸಂರಕ್ಷಣೆ ಮತ್ತು ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಪ್ರಾಧಿಕಾರದ ಪ್ರಮುಖ ಉದ್ದೇಶವಾಗಿದೆ. ಇದಕ್ಕಾಗಿ ಪ್ರತ್ಯೇಕ ಕಾಯ್ದೆ ರೂಪಿಸಿ, ಪ್ರಾಧಿಕಾರಕ್ಕೆ ಕಾನೂನುಬದ್ಧ ಅಧಿಕಾರ ನೀಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಅಶೋಕನ ಶಾಸನಗಳ ಸಂರಕ್ಷಣೆಗೆ ಆದ್ಯತೆ :
ಸನ್ನತಿ ಪ್ರಾಚೀನ ಬೌದ್ಧ ಧರ್ಮದ ಪ್ರಮುಖ ಕೇಂದ್ರವಾಗಿದ್ದು, ಇಲ್ಲಿ ದೊರೆತಿರುವ ಅಶೋಕನ ಶಾಸನಗಳು ಹಾಗೂ ಪುರಾತನ ಅವಶೇಷಗಳು ಈ ಪ್ರದೇಶದ ಐತಿಹಾಸಿಕ ಮಹತ್ವವನ್ನು ಸಾರುತ್ತವೆ. ಸನ್ನತಿಯನ್ನು ಬೌದ್ಧ ಪರಂಪರೆ, ಭಗವಾನ್ ಬುದ್ಧನ ತತ್ವಗಳು ಮತ್ತು ಬೋಧನೆಗಳನ್ನು ಪರಿಚಯಿಸುವ ಅಂತರರಾಷ್ಟ್ರೀಯ ಸಾಂಸ್ಕೃತಿಕ ಕೇಂದ್ರವಾಗಿ ರೂಪಿಸುವ ಆಶಯ ವಿಧೇಯಕದಲ್ಲಿದೆ.
ಪ್ರಾಧಿಕಾರದ ಅಧ್ಯಕ್ಷರಾಗಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹ-ಅಧ್ಯಕ್ಷರಾಗಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಕಾರ್ಯನಿರ್ವಹಿಸಲಿದ್ದಾರೆ. ಸಂಬಂಧಪಟ್ಟ ಇಲಾಖೆಗಳ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸದಸ್ಯರಾಗಿರಲಿದ್ದಾರೆ.
ಪ್ರಾಧಿಕಾರವು ಸನ್ನತಿಯ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಿ ಸರ್ಕಾರದ ಅನುಮೋದನೆ ಪಡೆಯಬೇಕು. ರಸ್ತೆ, ಬೀದಿ ದೀಪ, ಕುಡಿಯುವ ನೀರು, ಒಳಚರಂಡಿ, ಸ್ವಚ್ಛತೆ, ವಿದ್ಯುತ್, ಮಾರುಕಟ್ಟೆ, ಗ್ರಂಥಾಲಯ ಹಾಗೂ ಪ್ರವಾಸಿಗರಿಗೆ ಅಗತ್ಯವಿರುವ ಸಾರ್ವಜನಿಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶ ಕಲ್ಪಿಸಲಾಗಿದೆ.
ಪಾರಂಪರಿಕ ತಾಣಗಳ ಸಂರಕ್ಷಣೆಗೆ ವಿಶೇಷ ಒತ್ತು :
ಸನ್ನತಿಯ ಅಧಿಸೂಚಿತ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಾಧಿಕಾರದ ಪೂರ್ವಾನುಮತಿ ಕಡ್ಡಾಯವಾಗಿರಲಿದೆ. ಪುರಾತನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳ ಸಂರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ. ಅಗತ್ಯವಿದ್ದಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ಭೂಸ್ವಾಧೀನ ಮಾಡಿಕೊಳ್ಳಲು ಕೂಡ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಪ್ರಾಧಿಕಾರದ ಆಡಳಿತಾತ್ಮಕ ವೆಚ್ಚಗಳಿಗಾಗಿ ಪ್ರತ್ಯೇಕ ನಿಧಿ ಸ್ಥಾಪಿಸಲಾಗುತ್ತದೆ. ಪ್ರಾಧಿಕಾರ ಸ್ವಾವಲಂಬಿಯಾಗುವವರೆಗೆ ರಾಜ್ಯ ಸರ್ಕಾರ ವಾರ್ಷಿಕ ಅನುದಾನ ಒದಗಿಸಲಿದೆ. ಅಭಿವೃದ್ಧಿ ಕಾಮಗಾರಿಗಳ ವೆಚ್ಚವನ್ನು 2026-27ನೇ ಸಾಲಿನ ಸಂಬಂಧಿತ ಅನುದಾನದ ಲಭ್ಯತೆಯ ಆಧಾರದ ಮೇಲೆ ಭರಿಸಲು ಉದ್ದೇಶಿಸಲಾಗಿದೆ.
2025-26ನೇ ಸಾಲಿನ ರಾಜ್ಯ ಬಜೆಟ್‌ನ 230ನೇ ಪ್ಯಾರಾದಲ್ಲಿ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಘೋಷಿಸಲಾಗಿತ್ತು. 2025ರ ಜೂನ್ 27ರಂದು ಸರ್ಕಾರ ತಾತ್ವಿಕ ಅನುಮೋದನೆ ನೀಡಿದ್ದು, ಇದೀಗ ಪ್ರತ್ಯೇಕ ಕಾಯ್ದೆ ರೂಪಿಸುವ ಪ್ರಕ್ರಿಯೆಗೆ ಸಚಿವ ಸಂಪುಟದ ಒಪ್ಪಿಗೆ ದೊರೆತಿದೆ.
2026ನೇ ಸಾಲಿನ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಲಾಗಿದೆ. ಸನ್ನತಿಯ ಪಾರಂಪರಿಕ ಸಂಪತ್ತಿನ ಸಂರಕ್ಷಣೆ, ಸ್ಥಳೀಯ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮದ ಬೆಳವಣಿಗೆಗೆ ಪ್ರಾಧಿಕಾರ ಮಹತ್ವದ ಕೊಡುಗೆ ನೀಡಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.






