Kalaburagi| ಚಲಿಸುತ್ತಿದ್ದ ಕಾರಿಗೆ ಬೆಂಕಿ; ನಾಲ್ವರು ಪಾರು

ಕಲಬುರಗಿ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ಕಾರೊಂದು ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟುಹೋದ ಘಟನೆ ಶನಿವಾರ ಸಂಜೆ ಚಿತ್ತಾಪುರ ತಾಲೂಕಿನ ನಾಲವಾರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಯಾದಗಿರಿಯಿಂದ ಕಲಬುರಗಿಗೆ ಬರುತ್ತಿದ್ದ ಕಾರಿನಲ್ಲಿ ಚಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದರು. ನಾಲವಾರ ಸಮೀಪದ ಪೆಟ್ರೋಲ್ ಬಂಕ್ ಬಳಿ ಕಾರಿನ ಹಿಂಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅವರು, ತಕ್ಷಣ ಕಾರನ್ನು ರಸ್ತೆಬದಿಯಲ್ಲಿ ನಿಲ್ಲಿಸಿ ಕೆಳಗಿಳಿದಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದ್ದು, ದಟ್ಟ ಹೊಗೆ ಹರಡಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ವಾಡಿ ಪೊಲೀಸ್ ಠಾಣೆಯ ಪಿಎಸ್ಐ ಕೆ. ತಿರುಮಲೇಶ್ ಹಾಗೂ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಬೆಂಕಿ ನಂದಿಸಲು ಕ್ರಮ ಕೈಗೊಂಡಿದ್ದಾರೆ.
ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






