ಕಲಬುರಗಿ | ಸಾಮಾಜಿಕ ಕಾರ್ಯಕರ್ತ ಸಿದ್ದು ಹಿರೇಮಠ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

ಕಲಬುರಗಿ: ಸಾಮಾಜಿಕ ಕಾರ್ಯಕರ್ತ ಸಿದ್ದು ಹಿರೇಮಠ ವಿರುದ್ಧ ಜಾತಿ ನಿಂದನೆ, ಬೆದರಿಕೆ ಹಾಗೂ ಕೊಲೆ ಯತ್ನ ಆರೋಪದಡಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹೀರಾಪುರ ನಿವಾಸಿ ಸಿದ್ದಾರೂಢ ಕಾಂಬಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಕಲಂಗಳಡಿ ಸಿದ್ದು ಹಿರೇಮಠ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
"ಮೇ 24ರಂದು ರಾತ್ರಿ ನಗರದ ಮಿನಿ ವಿಧಾನಸೌಧ ಎದುರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಸಿದ್ದು ಹಿರೇಮಠ ಚಲಾಯಿಸುತ್ತಿದ್ದ ಇನ್ನೋವಾ ಕಾರು ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ತಿರುವಿನಲ್ಲಿ ನನ್ನ ವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ದ್ವಿಚಕ್ರ ವಾಹನದ ಮುಂಭಾಗದ ಬಂಪರ್ ಹಾನಿಗೊಳಗಾಗಿದೆ. ಘಟನೆ ಬಳಿಕ ಸಿದ್ದು ಹಿರೇಮಠ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ. ಹಳೆ ಜೇವರ್ಗಿ ರಸ್ತೆ ಸಮೀಪದ ಪಿಡಬ್ಲ್ಯೂಡಿ ಕ್ವಾಟ್ರಸ್ ಬಳಿ ಕಾರನ್ನು ವೇಗವಾಗಿ ಚಲಾಯಿಸಿ ತನ್ನ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ್ದಾರೆ. ಇದಲ್ಲದೆ ಬೆಂಬಲಿಗರನ್ನು ಕರೆಸಿ ಹಲ್ಲೆ ನಡೆಸಲಾಗಿದೆ" ಎಂದು ಸಿದ್ದಾರೂಢ ಕಾಂಬಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಕುರಿತು ಸಿದ್ದು ಹಿರೇಮಠ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 109, 352, 351(2) ಹಾಗೂ ಎಸ್ಸಿ, ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.




