ಕಲಬುರಗಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

ಕಲಬುರಗಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಜಿಲ್ಲಾ ಘಟಕದ ವತಿಯಿಂದ ನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಮಾತನಾಡಿ, ದೇಶಾದ್ಯಂತ ನಡೆಯುತ್ತಿರುವ ಈ ಹೋರಾಟ ಚುನಾವಣಾ ವ್ಯವಸ್ಥೆಯ ಪಾವಿತ್ರ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ ನಡೆಯುತ್ತಿದೆ ಎಂದು ಹೇಳಿದರು.
ಎಸ್‌ಐಆರ್ ಪ್ರಕ್ರಿಯೆಯಿಂದ ಬಡವರು, ದಲಿತರು ಹಾಗೂ ಅಲ್ಪಸಂಖ್ಯಾತರು ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕವಿದೆ. ಚುನಾವಣಾ ಆಯೋಗವು ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಆದರೆ, ಇತ್ತೀಚಿನ ಬೆಳವಣಿಗೆಗಳು ಆಯೋಗದ ಕಾರ್ಯವೈಖರಿ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಆರೋಪಿಸಿದರು.
ಚುನಾವಣಾ ಆಯೋಗದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದ ಅವರು, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳ ರಕ್ಷಣೆಗಾಗಿ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಎಸ್‌ಐಆರ್ ಪ್ರಕ್ರಿಯೆಯನ್ನು ತಡೆಹಿಡಿದು, ಅದರಲ್ಲಿನ ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು, ಮುಂಬರುವ ಚುನಾವಣೆಗಳನ್ನು ಸ್ಥಗಿತಗೊಳಿಸಿ, 2025ರ ಜನವರಿಯಲ್ಲಿದ್ದ ಮತದಾರರ ಪಟ್ಟಿಯನ್ನು ಮರುಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಸಜ್ಜನ್, ಪ್ರಧಾನ ಕಾರ್ಯದರ್ಶಿ ಶಾಂತಾ ಘಂಟಿ, ಖಜಾಂಚಿ ಸ್ವಾಮಿ ನಾಗಯ್ಯ ಸ್ವಾಮಿ, ಉಪಾಧ್ಯಕ್ಷರಾದ ಗೌರಮ್ಮ ಪಾಟೀಲ, ಅಯ್ಯಪ್ಪ ಕರಗಾರ, ಶ್ರೀಮಂತ ಬಿರಾದಾರ, ರಾಜಶೇಖರ ಕೊತಂಬರಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.






