ಕಲಬುರಗಿ| ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶರಣಬಸವೇಶ್ವರ ಕೆರೆಯಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಕಲಬುರಗಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಹೃದಯ ಭಾಗದಲ್ಲಿರುವ ಶ್ರೀ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ “ನಮ್ಮ ಕೆರೆ – ನಮ್ಮ ಹೆಮ್ಮೆ” ಧ್ಯೇಯದೊಂದಿಗೆ ಪಾಕ್ಷಿಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕೆರೆ ನಿರ್ವಹಣಾ ಪ್ರಾಧಿಕಾರದ ಸದಸ್ಯರು, ಎಸ್.ಎಸ್. ತೆಗನೂರ್ ಪಿಯು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಸ್ವಯಂಸೇವಾ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಪರಿಸರ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿ ನೆಡುವುದರೊಂದಿಗೆ ಕೆರೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಪ್ರತಿ ತಿಂಗಳು 15 ದಿನಗಳಿಗೊಮ್ಮೆ ವಿವಿಧ ಸಂಘ-ಸಂಸ್ಥೆಗಳು, ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನ ನಡೆಸಲು ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆರೆ ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರಿ ಅಂಬಿಕಾ, “ಶರಣಬಸವೇಶ್ವರ ಕೆರೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳಿಗೆ ಆಶ್ರಯ ನೀಡುವ ಮಹತ್ವದ ಪರಿಸರ ಸಂಪನ್ಮೂಲವಾಗಿದೆ. ಈ ಪ್ರದೇಶವನ್ನು ಸಂರಕ್ಷಿಸುವುದರ ಜೊತೆಗೆ ಪ್ರವಾಸಿಗರನ್ನು ಆಕರ್ಷಿಸುವ ತಾಣವಾಗಿ ಅಭಿವೃದ್ಧಿಪಡಿಸಲು ಸಾರ್ವಜನಿಕರು ಸಹಕರಿಸಬೇಕು” ಎಂದು ಕರೆ ನೀಡಿದರು.
ಈ ವರ್ಷದ ವಿಶ್ವ ಪರಿಸರ ದಿನದ ಧ್ಯೇಯವಾಕ್ಯವಾದ ‘ಪ್ರಕೃತಿಯಿಂದ ಪ್ರೇರಿತ ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ’ ಎಂಬ ಸಂದೇಶವನ್ನು ಉಲ್ಲೇಖಿಸಿದ ಕೆರೆ ನಿರ್ವಹಣಾ ಪ್ರಾಧಿಕಾರದ ಸದಸ್ಯ ಡಾ. ಸದಾನಂದ ಪೆರ್ಲ, “ಭವಿಷ್ಯದ ಅನಾಹುತಗಳನ್ನು ತಡೆಯಲು ಪರಿಸರ ಸಂರಕ್ಷಣೆ ಅತ್ಯಗತ್ಯ. ಗಿಡ ನೆಡುವುದು ಹಾಗೂ ಜಲಸಂಪನ್ಮೂಲಗಳ ರಕ್ಷಣೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಸಸ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ವಿಜಯ್ ಕುಮಾರ್, ಕೆರೆ ನಿರ್ವಹಣಾ ಪ್ರಾಧಿಕಾರದ ಸದಸ್ಯ ಬಸವಪ್ರಭು, ಯೋಗ ಶಿಕ್ಷಕ ನಾಗೇಂದ್ರಪ್ಪ ದಂಡೋತಿಕರ್ ಹಾಗೂ ವಿನ್ಯಾಸಕಾರ ಭರತ್ ಭೂಷಣ್ ಮಾತನಾಡಿ, ಭವಿಷ್ಯದ ಪೀಳಿಗೆಗೆ ಸುಂದರ ಹಾಗೂ ಆರೋಗ್ಯಕರ ಪರಿಸರವನ್ನು ಉಳಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಅಭಿಪ್ರಾಯಪಟ್ಟರು.
ಸಾಮಾಜಿಕ ಹೋರಾಟಗಾರ ಶರಣ್ ಐಟಿ, ಪ್ರೊ. ಶಂಕರಪ್ಪ ಹತ್ತಿ, ಜಿ. ಸತೀಶ್, ರವೀಂದ್ರ ತೆಗನೂರ್, ಆಕಾಶ್ ತೋನಸನಹಳ್ಳಿ, ಮೊಹಮ್ಮದ್ ಜಮೀರ್, ಮಹೇಶ್, ಮಂಜು, ಸಾಯಿ ರೆಡ್ಡಿ, ರಜತ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಾದೇಶಿಕ ಆಯುಕ್ತರ ಕಚೇರಿಯ ಸುನಿಲ್ ಕಾರ್ಯಕ್ರಮ ನಿರೂಪಿಸಿದರು.
ಸುಮಾರು ಮೂರು ಗಂಟೆಗಳ ಕಾಲ ನಡೆದ ಸ್ವಚ್ಛತಾ ಕಾರ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡು ಕೆರೆ ಉದ್ಯಾನವನ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಕಳೆದ 20 ವರ್ಷಗಳಿಂದ ಸ್ವಚ್ಛತಾ ಕಾರ್ಯದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಶಶಿಕಲಾ ಅವರಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಶೇಷ ಸನ್ಮಾನ ಮಾಡಲಾಯಿತು.






