Kalaburagi | ಪ್ರೊ.ಎನ್.ಆರ್.ಶೆಟ್ಟಿ ನಿಧನಕ್ಕೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಸಂತಾಪ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಮಾಜಿ ಕುಲಾಧಿಪತಿ ಹಾಗೂ ಖ್ಯಾತ ಶಿಕ್ಷಣ ತಜ್ಞ ಪ್ರೊ. (ಡಾ.) ಎನ್.ಆರ್. ಶೆಟ್ಟಿ ಅವರ ನಿಧನಕ್ಕೆ ವಿಶ್ವವಿದ್ಯಾಲಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ವಿಶ್ವವಿದ್ಯಾಲಯದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದು, ಪ್ರೊ. ಶೆಟ್ಟಿ ಅವರು ವಿಶ್ವವಿದ್ಯಾಲಯಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು.
ಸಂತಾಪ ಸೂಚಿಸಿ ಮಾತನಾಡಿದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು, ಪ್ರೊ. ಎನ್.ಆರ್. ಶೆಟ್ಟಿ ಅವರು ನವೆಂಬರ್ 2016ರಿಂದ ನವೆಂಬರ್ 2021ರವರೆಗೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿ ಸೇವೆ ಸಲ್ಲಿಸಿದ್ದರು. ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಸಾಂಸ್ಥಿಕ ಬೆಳವಣಿಗೆಯಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಅವರ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ದೂರದೃಷ್ಟಿ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದೆ ಎಂದು ಸ್ಮರಿಸಿದರು.
ತಮ್ಮ ದೂರದೃಷ್ಟಿ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಯ ಬಗೆಗಿನ ಬದ್ಧತೆಯಿಂದ ಬೆಂಗಳೂರು ವಿಶ್ವವಿದ್ಯಾಲಯ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಸುರತ್ಕಲ್ನ ಎಂಜಿನಿಯರಿಂಗ್ ಕಾಲೇಜು ಹಾಗೂ ನಿಟ್ಟೆ ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ಹಲವು ಉನ್ನತ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಸಿಯುಕೆಯ ಕುಲಾಧಿಪತಿಯಾಗಿದ್ದ ಅವಧಿಯಲ್ಲಿ ವಿಶ್ವವಿದ್ಯಾಲಯದ ಹಲವು ಪ್ರಮುಖ ಶೈಕ್ಷಣಿಕ ಕಾರ್ಯಕ್ರಮಗಳು, ಘಟಿಕೋತ್ಸವಗಳು ಹಾಗೂ ಕ್ಯಾಂಪಸ್ ಉದ್ಘಾಟನಾ ಸಮಾರಂಭಗಳಲ್ಲಿ ಭಾಗವಹಿಸಿದ್ದರು. ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಜೀವಮಾನದ ಸೇವೆ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಳು ಸದಾ ಸ್ಮರಣೀಯವಾಗಿವೆ ಎಂದು ಹೇಳಿದರು.
ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಕೆ. ಹನುಮೇಗೌಡ ಮಾತನಾಡಿ, ಪ್ರೊ. ಶೆಟ್ಟಿ ಅವರು ಎಂಜಿನಿಯರಿಂಗ್ ಕೋರ್ಸ್ಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮಹತ್ವದ ಸಹಕಾರ ಮತ್ತು ಮಾರ್ಗದರ್ಶನ ನೀಡಿದ್ದರು. ಅಲ್ಲದೆ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ 10 ಎಕರೆ ಜಾಗವನ್ನು ಒಪ್ಪಂದದ ಆಧಾರದ ಮೇಲೆ ಮೀಸಲಿಡುವ ಮೂಲಕ ಸಿಯುಕೆಯ ಶೈಕ್ಷಣಿಕ ಬೆಳವಣಿಗೆಗೆ ಸಹಕರಿಸಲು ಪ್ರಯತ್ನಿಸಿದ್ದರು. ಆದರೆ, ಕಾರಣಾಂತರಗಳಿಂದ ಈ ಯೋಜನೆ ಕಾರ್ಯರೂಪಕ್ಕೆ ಬರಲಿಲ್ಲ ಎಂದು ಸ್ಮರಿಸಿದರು.
ಭೌತಿಕ ವಿಜ್ಞಾನ ನಿಕಾಯದ ಡೀನ್ ಪ್ರೊ. ರಾಜೀವ್ ಜೋಷಿ ಮಾತನಾಡಿ, ಪ್ರೊ. ಶೆಟ್ಟಿ ಅವರೊಂದಿಗೆ ಉತ್ತಮ ಒಡನಾಟವಿತ್ತು. ಕುಲಾಧಿಪತಿಯಾಗಿ ಅವರು ವಿಶ್ವವಿದ್ಯಾಲಯದ ಶೈಕ್ಷಣಿಕ ಕ್ಷೇತ್ರದ ಸಮಗ್ರ ಸುಧಾರಣೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದರು. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ)ಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಆ ಸಂಸ್ಥೆಯೊಂದಿಗೆ ಸಿಯುಕೆ ಉತ್ತಮ ಶೈಕ್ಷಣಿಕ ಹಾಗೂ ಸಂಶೋಧನಾ ಸಂಬಂಧ ಬೆಳೆಸುವಲ್ಲಿ ಮಹತ್ವದ ಪ್ರಯತ್ನ ನಡೆಸಿದ್ದರು. ಅವರ ಮಾರ್ಗದರ್ಶನ ಮತ್ತು ಸಹಕಾರದಿಂದ ವಿಶ್ವವಿದ್ಯಾಲಯವು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಯಿತು. ಅವರ ನಿಧನವು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಸಿಯುಕೆಯ ಬೆಳವಣಿಗೆಗೆ ಅವರು ನೀಡಿದ ಅಮೂಲ್ಯ ಸೇವೆ, ಮಾರ್ಗದರ್ಶನ ಮತ್ತು ಕೊಡುಗೆಗಳನ್ನು ವಿಶ್ವವಿದ್ಯಾಲಯವು ಸದಾ ಸ್ಮರಿಸಲಿದೆ ಎಂದು ಹೇಳಿದರು.
ಶ್ರದ್ಧಾಂಜಲಿ ಸಭೆಯ ಅಂತ್ಯದಲ್ಲಿ ಕುಲಪತಿ, ಕುಲಸಚಿವರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮೌನಾಚರಣೆ ಮಾಡುವ ಮೂಲಕ ಅಗಲಿದ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಪ್ರಾರ್ಥಿಸಿದರು.






