Kalaburagi | ಕಲುಷಿತ ನೀರು ಸೇವನೆ : ಬಿಸಿಎಂ ಹಾಸ್ಟೆಲ್‌ನ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಹಳೆಯ ಬಿಸಿಎಂ (BCM) ಬಾಲಕರ ಹಾಸ್ಟೆಲ್‌ನಲ್ಲಿ ಕುಡಿಯುವ ನೀರಿನ ಮಾಲಿನ್ಯದಿಂದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಕಳೆದ ಎರಡು ದಿನಗಳಿಂದ ಕುಡಿಯುವ ನೀರಿನಿಂದಾಗಿ ವಿದ್ಯಾರ್ಥಿಗಳಿಗೆ ವಾಂತಿ, ಎದೆಬಿಸಿ ಹಾಗೂ ಇತರೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದು, ನೀರು ಕುಡಿಯುವಾಗ ವಾಸನೆ ಬರುತ್ತಿದ್ದನ್ನು ಕಂಡು ನೀರಿನ ಟ್ಯಾಂಕ್ ಅನ್ನು ಗಮನಿಸಿದಾಗ ಎರಡು ಹಲ್ಲಿಗಳು ಸತ್ತುಬಿದ್ದದ್ದು ಕಂಡಿದೆ. ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ ಸಮಾಜಶಾಸ್ತ್ರ ಸ್ನಾತಕೋತ್ತರ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಅರುಣಕುಮಾರ್ ನಾಯಕೋಡಿ ಹಾಗೂ ಇತಿಹಾಸ ವಿಭಾಗದ ವಿದ್ಯಾರ್ಥಿ ಮಲ್ಲಿಕಾರ್ಜುನ ಜೇವರ್ಗಿ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ಅಗತ್ಯ ಔಷಧೋಪಚಾರ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಹಾಸ್ಟೆಲ್‌ನಲ್ಲಿ ಸುಮಾರು 90 ವಿದ್ಯಾರ್ಥಿಗಳು ವಾಸವಾಗಿದ್ದು, ಸ್ವಚ್ಛತೆ ಮತ್ತು ಆರೋಗ್ಯಕರ ವಾತಾವರಣದ ಕೊರತೆ ಬಗ್ಗೆ ವಿದ್ಯಾರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸ್ಟೆಲ್ ಆವರಣ ಗಲೀಜಾಗಿದ್ದು, ನಿಯಮಿತವಾಗಿ ಸ್ವಚ್ಛತೆ ಕಾಪಾಡಲಾಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಹಾಸ್ಟೆಲ್ ವಾರ್ಡನ್ ನವೀನ್ ಅವರು ಮೂರು ತಿಂಗಳಿಗೊಮ್ಮೆ ಮಾತ್ರ ಹಾಸ್ಟೆಲ್‌ಗೆ ಭೇಟಿ ನೀಡುತ್ತಾರೆ. ಆಹಾರ ಮತ್ತು ಕುಡಿಯುವ ನೀರಿನ ಗುಣಮಟ್ಟದ ಕುರಿತು ಅಧಿಕಾರಿಗಳು ಸೂಕ್ತ ಗಮನಹರಿಸುತ್ತಿಲ್ಲ. ವಾರ್ಡನ್ ಹಾಗೂ ಸಿಬ್ಬಂದಿಯವರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ, ಕುಡಿಯುವ ನೀರು ಮತ್ತು ಆಹಾರದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿ, ಹಾಸ್ಟೆಲ್‌ನಲ್ಲಿ ಸಮರ್ಪಕ ಸ್ವಚ್ಛತೆ ಕಾಪಾಡುವಂತೆ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.






