Kalaburagi | ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ : ಡಾ.ಸಿ.ಸೋಮಶೇಖರ್ ಘೋಷಣೆ

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಗತವೈಭವವನ್ನು ಮರಳಿ ಸ್ಥಾಪಿಸುವುದರ ಜೊತೆಗೆ ಕನ್ನಡಮ್ಮನ ಗುಡಿಸೇವೆ ಮತ್ತು ನುಡಿಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಘೋಷಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನವು ಅಧಿಕಾರ ಅನುಭವಿಸುವ ಹುದ್ದೆಯಲ್ಲ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಜನಪದದ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಗಾಗಿ ಶ್ರಮಿಸುವ ಜವಾಬ್ದಾರಿಯುತ ಸ್ಥಾನವಾಗಿದೆ ಎಂದು ಹೇಳಿದರು.
ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಎಂಬ ಪರಿಕಲ್ಪನೆಯಡಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಅವುಗಳನ್ನು ನಿರಂತರವಾಗಿ ಅನುಷ್ಠಾನಗೊಳಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯನ್ನಾಗಿ ರೂಪಿಸುವ ಹಂಬಲದಿಂದ ಚುನಾವಣಾ ಕಣಕ್ಕಿಳಿದಿದ್ದೇನೆ ಎಂದು ತಿಳಿಸಿದರು.
ವಿದ್ಯಾರ್ಥಿ ಜೀವನದಿಂದಲೇ ಅಪ್ಪಟ ಕನ್ನಡಾಭಿಮಾನಿಯಾಗಿರುವ ತಾವು ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಪಡೆದಿದ್ದು, ಐಎಎಸ್ ಪರೀಕ್ಷೆಯನ್ನೂ ಕನ್ನಡ ಮಾಧ್ಯಮದಲ್ಲೇ ಬರೆದಿದ್ದೇನೆ. ಕೇಂದ್ರ ಪ್ರಥಮ ದರ್ಜೆ ಸೇವೆಗೆ ಆಯ್ಕೆಯಾದ ನಂತರ ಕರ್ನಾಟಕದಲ್ಲಿಯೇ ಸೇವೆ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸೇವೆಯನ್ನು ಆಯ್ಕೆ ಮಾಡಿಕೊಂಡೆ ಎಂದು ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ ಹಾಗೂ ತುಮಕೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಸಂದರ್ಭಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಕನ್ನಡ ಭಾಷೆ ಸಾರ್ವಭೌಮವಾಗಿ ಉಳಿಯಬೇಕು ಎಂಬ ಆಶಯದೊಂದಿಗೆ ಕೆಲಸ ಮಾಡಿದ್ದು, ಈಗ ಸೇವಾಕಾಂಕ್ಷಿಯಾಗಿ ಕನ್ನಡಿಗರ ಮುಂದೆ ಬಂದಿದ್ದೇನೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿಗೆ ಸುಮಾರು ಒಂದು ಕೋಟಿ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿ ಹೊಂದಲಾಗಿದೆ. ಸಾಹಿತ್ಯ ಮತ್ತು ಸಂಸ್ಕೃತಿಯ ನಿತ್ಯೋತ್ಸವದ ಜೊತೆಗೆ ಯುವಕರು ಹಾಗೂ ಮಕ್ಕಳನ್ನು ಪರಿಷತ್ತಿನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಲಾಗುವುದು. ಗಡಿ ಭಾಗಗಳಲ್ಲಿರುವ ಕನ್ನಡ ಶಾಲೆಗಳ ಅಭಿವೃದ್ಧಿಗೂ ವಿಶೇಷ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಈ ಎಲ್ಲ ಉದ್ದೇಶಗಳನ್ನು ಒಳಗೊಂಡ ಸುಮಾರು 21 ಅಂಶಗಳ ಪ್ರಣಾಳಿಕೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಡಾ. ಸಿ. ಸೋಮಶೇಖರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷರಾದ ಅಪ್ಪಾರಾವ್ ಅಕ್ಕೋಣಿ, ಡಾ. ಶಬ್ದ ಬಸವಪ್ಪ ವಡ್ಡನಕೇರಿ, ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ಶಿವಲಿಂಗಪ್ಪ, ಬಸವರಾಜ ಮೊರಬದ, ಪ್ರಭುಲಿಂಗ ಗೊಬ್ಬೂರ, ಡಾ. ಗಣಪತಿ ಸಿಂಧೆ, ಶಾಂತಲಿಂಗ ಪಾಟೀಲ್ ಕೋಳಕೂರ, ರಾಜಕುಮಾರ ಜೈನ್, ಮಂಜುನಾಥ ನಾಲವಾರಕರ, ಸಚಿನ್ ಪರತಾಬಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.






