Kalaburagi | ಮಾನವ ಕಳ್ಳಸಾಗಾಣಿಕೆ ತಡೆಗೆ ಇಲಾಖೆಗಳ ಸಮನ್ವಯ ಅಗತ್ಯ: ಶ್ರೀನಿವಾಸ ನವಲೆ

ಕಲಬುರಗಿ: ಮಾನವ ಕಳ್ಳಸಾಗಾಣಿಕೆ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಅಮಾನವೀಯ ಅಪರಾಧವಾಗಿದ್ದು, ಅದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು, ಮಕ್ಕಳು ಹಾಗೂ ದುರ್ಬಲ ವರ್ಗದ ಜನರನ್ನು ಮಾನವ ಕಳ್ಳಸಾಗಾಣಿಕೆಯಿಂದ ರಕ್ಷಿಸುವುದು ಪ್ರತಿಯೊಬ್ಬರ ಸಾಮಾಜಿಕ ಹಾಗೂ ಕಾನೂನುಬದ್ಧ ಜವಾಬ್ದಾರಿಯಾಗಿದೆ. ಪ್ರಕರಣಗಳನ್ನು ತ್ವರಿತವಾಗಿ ಗುರುತಿಸಿ ಸಂತ್ರಸ್ತರಿಗೆ ಸೂಕ್ತ ರಕ್ಷಣೆ, ಕಾನೂನು ನೆರವು ಹಾಗೂ ಪುನರ್ವಸತಿ ಒದಗಿಸುವಲ್ಲಿ ಸಂಬಂಧಿತ ಇಲಾಖೆಗಳು ಹೆಚ್ಚಿನ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ನಗರ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ಅಕ್ಕಮಹಾದೇವಿ ಮಾತನಾಡಿ, ಮಾನವ ಕಳ್ಳಸಾಗಾಣಿಕೆ ತಡೆಗೆ ಪೊಲೀಸ್ ಇಲಾಖೆ, ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆಯುವ ಕಳ್ಳಸಾಗಾಣಿಕೆ, ಬಲವಂತದ ದುಡಿಮೆ ಹಾಗೂ ಲೈಂಗಿಕ ಶೋಷಣೆ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು. ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ಮಕ್ಕಳ ಸಹಾಯವಾಣಿ 1098 ಹಾಗೂ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್ ಮಾತನಾಡಿ, ಉದ್ಯೋಗಕ್ಕಾಗಿ ಬೇರೆ ರಾಜ್ಯಗಳಿಗೆ ತೆರಳುವ ಹೆಣ್ಣುಮಕ್ಕಳು ಮಾನವ ಕಳ್ಳಸಾಗಾಣಿಕೆಗೆ ಹೆಚ್ಚು ಒಳಗಾಗುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಪಾಲಕರು ಹಾಗೂ ಕುಟುಂಬದವರು ಸೂಕ್ತ ಜಾಗೃತಿ ವಹಿಸುವುದು ಅಗತ್ಯ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶಿವಶರಣಪ್ಪ ಮಾತನಾಡಿ, ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾವಲು ಸಮಿತಿಗಳು ಬಾಲ್ಯವಿವಾಹ ತಡೆ, ಮಕ್ಕಳ ಸುರಕ್ಷತೆ, ಶಾಲೆಯಿಂದ ಹೊರಗುಳಿದ ಮಕ್ಕಳ ಗುರುತಿಸುವಿಕೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸಕ್ರಿಯ ಪಾತ್ರವಹಿಸಬೇಕು. ಪೋಕ್ಸೊ ಕಾಯ್ದೆ, ಮಾನವ ಕಳ್ಳಸಾಗಾಣಿಕೆ ಹಾಗೂ ಬಾಲ್ಯವಿವಾಹ ಕುರಿತು ಸಾರ್ವಜನಿಕರಲ್ಲಿ ನಿರಂತರ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಉಪ ನಿರ್ದೇಶಕ ರಾಜಕುಮಾರ ರಾಠೋಡ ಮಾತನಾಡಿ, ಪ್ರತಿ ವರ್ಷ ಜುಲೈ 30ರಂದು ವಿಶ್ವಸಂಸ್ಥೆಯ ನೇತೃತ್ವದಲ್ಲಿ ವಿಶ್ವ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಆಚರಿಸಲಾಗುತ್ತದೆ. ಈ ಅಪರಾಧವನ್ನು ನಿರ್ಮೂಲನೆಗೊಳಿಸಲು ಸರ್ಕಾರ, ಆಡಳಿತ, ಸ್ವಯಂಸೇವಾ ಸಂಸ್ಥೆಗಳು ಹಾಗೂ ನಾಗರಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ವಿಶ್ವರಾಧ್ಯ ಕೆ. ಇಜೇರಿ ಮಾತನಾಡಿ, ಮಕ್ಕಳ ಶಿಕ್ಷಣ, ಸುರಕ್ಷತೆ ಹಾಗೂ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸುವ ಮೂಲಕ ಮಾನವ ಕಳ್ಳಸಾಗಾಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ಹೇಳಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಸಹ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಫಜಲಪುರ ಹಾಗೂ ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಮಾರ್ಗದರ್ಶಿ ಹಾಗೂ ಡಾನ್ ಬಾಸ್ಕೋ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಉಪ ನಿರ್ದೇಶಕ ರಾಜಕುಮಾರ ರಾಠೋಡ ಸ್ವಾಗತಿಸಿದರು. ಕಾನೂನು ಮತ್ತು ಪರಿವೀಕ್ಷಣಾ ಅಧಿಕಾರಿ ಭರತೇಶ ಶೀಲವಂತ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಸಮಾಲೋಚಕ ವಿಠ್ಠಲ ವಂದಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಅವರು ಮಾನವ ಕಳ್ಳಸಾಗಾಣಿಕೆ ತಡೆ ಕುರಿತ ಪ್ರತಿಜ್ಞಾವಿಧಿ ಬೋಧಿಸಿದರು. ಜೊತೆಗೆ ಮಾರ್ಗದರ್ಶಿ ಸ್ವಯಂಸೇವಾ ಸಂಸ್ಥೆಯಿಂದ ಬಾಲ್ಯವಿವಾಹ ಹಾಗೂ ಪೋಕ್ಸೊ ಕುರಿತ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.






