Kalaburagi | ಸ್ಲಂ ನಿವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ ಸಮನ್ವಯ ಅಗತ್ಯ: ಶ್ರೀನಿವಾಸ ನವಲೆ

ಕಲಬುರಗಿ: ಸ್ಲಂ ನಿವಾಸಿಗಳು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳ ಪರಿಹಾರ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ನಗರದ ಸುವರ್ಣ ಭವನದಲ್ಲಿ ಶುಕ್ರವಾರ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸ್ಲಂ ನಿವಾಸಿಗಳ ಸಮಸ್ಯೆಗಳ ಕುರಿತು ವಿವಿಧ ಸರ್ಕಾರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಮಾತನಾಡಿ, ಶಿಕ್ಷಣವು ಸಮಾಜದ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ಲಂ ನಿವಾಸಿಗಳ ವಸತಿ, ಮೂಲಸೌಕರ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದೊಂದಿಗೆ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಘಟನಾ ಸಂಚಾಲಕ ಜನಾರ್ಧನ ಹಳ್ಳಬೆಂಚಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ತಾಂತ್ರಿಕ ನಿರ್ದೇಶಕ ಹಾಗೂ ಕಾರ್ಯಪಾಲಕ ಅಭಿಯಂತರ ಎಂ.ಎ. ಖಯ್ಯಮ್, ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತೆ ಪ್ರಮೀಳಾ ಎಂ.ಕೆ., ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಶಾಖಾ ವ್ಯವಸ್ಥಾಪಕ ಡಾ. ಚಂದ್ರಕಾಂತ ಚಂದಾಪೂರ, ಮಹಾನಗರ ಪಾಲಿಕೆ ವಲಯ ಆಯುಕ್ತ ಪ್ರಬುದ್ಧ ಕಾಂಬಳೆ, ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಎಸ್.ಆರ್. ಹಳ್ಳಿಮನಿ, ಸ್ಲಂ ಜನಾಂದೋಲನದ ಸಂಚಾಲಕಿ ರೇಣುಕಾ ಸರಡಗಿ ಹಾಗೂ ಅಧ್ಯಕ್ಷೆ ಗೌರಮ್ಮ ಮಾಕಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ 2025-26ನೇ ಸಾಲಿನ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.






