ಕಲಬುರಗಿ | ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ

ಚಿಂಚೋಳಿ: ಶೋಷಿತರು ಹಾಗೂ ಹಿಂದುಳಿದ ವರ್ಗಗಳ ಆಶಾಕಿರಣ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆಯನ್ನು ತಾಲೂಕು ಆಡಳಿತ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಚಂದಾಪುರದ ಹಳೆ ತಹಶೀಲ್ದಾರ್ ಕಚೇರಿ ಸಮೀಪದ ಡಿ. ದೇವರಾಜ ಅರಸು ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರು, ಡಿ. ದೇವರಾಜ ಅರಸು ಅವರು ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡಿದವರಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸಲು ಅಧಿಕಾರವನ್ನು ಸಾಧನವಾಗಿ ಬಳಸಿಕೊಂಡ ಮಹಾನ್ ನಾಯಕರು ಎಂದು ಸ್ಮರಿಸಿದರು.
‘ಉಳುವವನೇ ಭೂಮಿಯ ಒಡೆಯ’ ಕಾಯ್ದೆಯ ಮೂಲಕ ಬಡ ರೈತರಿಗೆ ಭೂಮಿಯ ಹಕ್ಕು ಕಲ್ಪಿಸಿ ಸಾಮಾಜಿಕ ಕ್ರಾಂತಿಗೆ ಕಾರಣರಾದ ಅರಸು ಅವರ ಕೊಡುಗೆ ಅಪಾರವಾಗಿದೆ. ಜೀತಪದ್ಧತಿ ನಿರ್ಮೂಲನೆ, ಬಡವರ ಸಾಲ ಮನ್ನಾ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಗಳ ಸ್ಥಾಪನೆ ಸೇರಿದಂತೆ ಅವರು ಜಾರಿಗೆ ತಂದ ಹಲವು ಜನಪರ ಯೋಜನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.
ಮುಖ್ಯ ಉಪನ್ಯಾಸಕರಾಗಿ ಮಾತನಾಡಿದ ಸಿ.ಬಿ. ಪಾಟೀಲ ಕಾಲೇಜು, ಚಂದಾಪುರದ ಡಾ. ಎಂ.ಎನ್. ಸುಲ್ತಾನಪೂರ ಅವರು, ಡಿ. ದೇವರಾಜ ಅರಸು ಅವರು 1915ರ ಆಗಸ್ಟ್ 20ರಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್ಲಹಳ್ಳಿಯಲ್ಲಿ ಜನಿಸಿದರು. ಮೈಸೂರಿನಲ್ಲಿ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ರಾಜಕೀಯ ಪ್ರವೇಶಿಸಿದ ಅವರು, ತಮ್ಮ ಆಡಳಿತಾವಧಿಯಲ್ಲಿ ಹಲವು ಮಹತ್ವದ ಸಾಮಾಜಿಕ ಸುಧಾರಣೆಗಳನ್ನು ಜಾರಿಗೆ ತಂದರು ಎಂದು ತಿಳಿಸಿದರು.
1973ರ ನವೆಂಬರ್ 1ರಂದು ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣ ಮಾಡಿದ ಐತಿಹಾಸಿಕ ಸಂದರ್ಭ ಅರಸು ಅವರ ಆಡಳಿತಾವಧಿಯಲ್ಲೇ ನಡೆದಿದ್ದು, ಅವರ ಸಮಾಜಮುಖಿ ಚಿಂತನೆಗಳು ಹಾಗೂ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಸದಾ ಪ್ರೇರಣೆಯಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಹುಲ್ ಪಂಚಶೀಲ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ಸಯ್ಯದ್ ಲತೀಫ್, ಅಗ್ನಿಶಾಮಕ ಠಾಣಾಧಿಕಾರಿ ಶೇಖ್ ಹಸನ್, ಸಾವಿತ್ರಿ ಬಡಿಗೇರ್, ಕ್ಷೇತ್ರ ಶಿಕ್ಷಣಾಧಿಕಾರಿ ದೋಳಪ್ಪ, ಮುಖಂಡರಾದ ಕೆ.ಎಂ. ಬಾರಿ, ಹಣಮಂತ ಪೂಜಾರಿ, ಗೋಪಾಲ್ ಎಂ.ಪಿ., ಖಾಲಿಲ್ ಪಟೇಲ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಹುಲ್ ಪಂಚಶೀಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಪಾಲಮೂರ ಕಾರ್ಯಕ್ರಮ ನಿರೂಪಿಸಿದರು. ಅಶೋಕ್ ಹೂವಿನಬಾಯಿ ವಂದನಾರ್ಪಣೆ ಸಲ್ಲಿಸಿದರು.






