Kalaburagi | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ದಸಂಸ ಪ್ರತಿಭಟನೆ
ಎಸ್ಐಆರ್ ಪ್ರಕ್ರಿಯೆ ರದ್ದುಗೊಳಿಸಲು ಒತ್ತಾಯಿಸಿ ಜಗತ್ ವೃತ್ತದಲ್ಲಿ ಧರಣಿ

ಕಲಬುರಗಿ: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ) ವತಿಯಿಂದ ನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಮತದಾರರ ಹಕ್ಕುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ ರಾಜ್ಯ ಸಂಚಾಲಕ ಡಿ.ಜಿ. ಸಾಗರ, ಮತದಾರರ ಗುರುತಿನ ಚೀಟಿ ನೀಡುವ ಹಾಗೂ ರದ್ದುಪಡಿಸುವ ಪ್ರಕ್ರಿಯೆಗಳು ಕಾನೂನಿನ ನಿಯಮಾವಳಿಗಳ ಪ್ರಕಾರವೇ ನಡೆಯಬೇಕು. ಆದರೆ, ಪ್ರಸ್ತುತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯ ಕುರಿತು ಹಲವು ಆಕ್ಷೇಪಗಳು ವ್ಯಕ್ತವಾಗಿದ್ದರೂ ಅದನ್ನು ಮುಂದುವರಿಸುತ್ತಿರುವುದು ಖಂಡನೀಯ. ಮತದಾರರ ಹಕ್ಕುಗಳ ರಕ್ಷಣೆಗಾಗಿ ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಚುನಾವಣಾ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ರಕ್ಷಣೆ ಒದಗಿಸುವ 2023ರ ಚುನಾವಣಾ ಆಯೋಗದ ನೇಮಕಾತಿ ಕಾಯ್ದೆಯನ್ನು ರದ್ದುಗೊಳಿಸಬೇಕು. ಚುನಾವಣಾ ಆಯುಕ್ತರ ಆಯ್ಕೆಗೆ ಸ್ವತಂತ್ರ ಹಾಗೂ ವಿಶ್ವಾಸಾರ್ಹ ಪ್ರಕ್ರಿಯೆಯನ್ನು ಜಾರಿಗೊಳಿಸಬೇಕು. ಯಾವುದೇ ಕಾರಣಕ್ಕೂ ಅರ್ಹ ಮತದಾರರನ್ನು ಕಡೆಗಣಿಸಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಎಸ್ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳು ಹಾಗೂ ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿಯ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ. ಚುನಾವಣಾ ಆಯೋಗವು ಆರೋಪಗಳನ್ನು ನಿರಾಕರಿಸಿದ್ದರೂ, ಮತದಾರರಲ್ಲಿರುವ ಆತಂಕ ಮತ್ತು ಗೊಂದಲಗಳನ್ನು ನಿವಾರಿಸುವಲ್ಲಿ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.
ಮತದಾರರು ತಮ್ಮ ಮತದಾನದ ಹಕ್ಕು ಉಳಿಯುತ್ತದೆಯೇ ಎಂಬ ಆತಂಕಕ್ಕೆ ಒಳಗಾಗದಂತೆ ಚುನಾವಣಾ ಆಯೋಗ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕಿನ ರಕ್ಷಣೆಗೆ ಆದ್ಯತೆ ನೀಡಬೇಕು. ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಿದ ಅವರು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಸುರೇಶ ಹಾದಿಮನಿ, ಎಸ್.ಪಿ. ಸುಳ್ಳದ, ಕೃಷ್ಣಪ್ಪ ಕರಣಿಕ, ಉಮೇಶ ನರೋಣಾ ಸೇರಿದಂತೆ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.






