Kalaburagi | ನೀಟ್ ಪೇಪರ್ ಸೋರಿಕೆ ಖಂಡಿಸಿ ದಲಿತ ಸೇನೆ ಧರಣಿ

ಕಲಬುರಗಿ: ದೇಶದಲ್ಲಿ ನೀಟ್ (NEET) ಸೇರಿದಂತೆ ರಾಷ್ಟ್ರೀಯ ಮಟ್ಟದ ಪ್ರಮುಖ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳನ್ನು ತಡೆಗಟ್ಟಬೇಕು, ಹಗರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅಮರಣಾಂತ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಅವರ ಜೀವ ರಕ್ಷಣೆ ಮಾಡಿ, ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ದಲಿತ ಸೇನೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಉದ್ದೇಶಿಸಿದ ಮನವಿಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ನೀಟ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಪದೇಪದೆ ಸೋರಿಕೆಯಾಗುತ್ತಿರುವುದು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಕುಗ್ಗಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಧಕ್ಕೆಯಾಗಿದ್ದು, ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪರೀಕ್ಷಾ ಅಕ್ರಮಗಳಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳನ್ನು ವ್ಯವಸ್ಥೆಯ ಬಲಿಪಶುಗಳೆಂದು ಪರಿಗಣಿಸಿ, ಅವರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಪರೀಕ್ಷಾ ವ್ಯವಸ್ಥೆಯ ವೈಫಲ್ಯಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಿ, ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆ ಹಾಗೂ ಪರೀಕ್ಷಾ ಮಂಡಳಿಗಳ ಕಾರ್ಯವೈಖರಿಯನ್ನು ಮರುಪರಿಶೀಲಿಸಬೇಕು. ಪ್ರಶ್ನೆಪತ್ರಿಕೆ ಸೋರಿಕೆ ಜಾಲಗಳ ವಿರುದ್ಧ ಕಠಿಣ ರಾಷ್ಟ್ರೀಯ ಕಾನೂನಿನಡಿ ಕ್ರಮ ಕೈಗೊಂಡು, ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕು ಎಂದು ಆಗ್ರಹಿಸಿದರು.
ಅಮರಣಾಂತ ಉಪವಾಸ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ರಕ್ಷಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಬೇಕು. ಅವರೊಂದಿಗೆ ಮಾತುಕತೆ ನಡೆಸಿ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಮೂಲಕ ಅವರ ಜೀವ ರಕ್ಷಣೆ ಮಾಡಬೇಕು ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖಂಡರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಮಂಜುನಾಥ ಭಂಡಾರಿ, ಶಿವಲಿಂಗಪ್ಪ ದೊಡ್ಡಮನಿ, ಶಿವಲಿಂಗ ಮಾಡ್ಯಾಳಕರ, ಸುನೀಲ್ ಶಿಂಧೆ, ಕಪಿಲ್ ವಾಲಿ, ಪಂಚಶೀಲ ಚಂಬಾಳ, ಶಿವಕುಮಾರ್ ಗೋಳಾ, ಧರ್ಮರಾಜ ಕೋನಾ, ಚಂದ್ರಕಾಂತ ವಿಜಾಪುರ, ಗುರು ಮಾಳಗೆ, ಅರವಿಂದ ಕಮಲಾಪುರ, ಶಿವ ಸಂಗೊಳಗಿ, ಅಶೋಕ ಸೇರಿದಂತೆ ಹಲವರು ಭಾಗವಹಿಸಿದ್ದರು.






