Kalaburagi | ಆರೆಸ್ಸೆಸ್ ನಿಷೇಧಕ್ಕೆ ಆಗ್ರಹಿಸಿ ದಸಂಸದಿಂದ ಧರಣಿ

ಕಲಬುರಗಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ವತಿಯಿಂದ ನಗರದ ಜಗತ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಶನಿವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಧರಣಿಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಅರ್ಜುನ್ ಭದ್ರೆ, ಆರೆಸ್ಸೆಸ್ ಕುರಿತು ಹಲವು ಆರೋಪಗಳನ್ನು ಮಾಡಿದರು. 1948ರಲ್ಲಿ ಆಗಿನ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಆರ್‌ಎಸ್‌ಎಸ್‌ನ ಆಗಿನ ಮುಖ್ಯಸ್ಥ ಎಂ.ಎಸ್. ಗೋಳ್ವಾಲ್ಕರ್ ಅವರಿಗೆ ಬರೆದ ಪತ್ರದಲ್ಲಿನ ಅಂಶಗಳನ್ನು ಗಮನಿಸಿದರೆ ಸಂಘಟನೆಯ ನೋಂದಣಿ ಅಗತ್ಯದ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತವೆ ಎಂದು ಹೇಳಿದರು.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಕುರಿತು ಕೇಳಿರುವ ಪ್ರಶ್ನೆಗಳಿಗೆ ಸಂಘದ ನಾಯಕರು ಸಮರ್ಪಕ ಉತ್ತರ ನೀಡುತ್ತಿಲ್ಲ. ಸಂಘಟನೆಗೆ 100 ವರ್ಷ ಪೂರೈಸಿರುವುದರಿಂದ ನೋಂದಣಿ ಅಗತ್ಯವಿಲ್ಲ ಎಂಬ ಹೇಳಿಕೆ ಸರಿಯಲ್ಲ ಎಂದು ಅಭಿಪ್ರಾಯಪಟ್ಟ ಅವರು, ಸಂಘಟನೆಯನ್ನು ಕಾನೂನಿನ ವ್ಯಾಪ್ತಿಯಲ್ಲಿ ನೋಂದಣಿ ಮಾಡಿಸಬೇಕು. ಇಲ್ಲವಾದರೆ ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ಆರ್‌ಎಸ್‌ಎಸ್ ದೇಶದಲ್ಲಿ ಕೋಮುದ್ವೇಷ ಹರಡಿಸಿ ಹಿಂಸಾತ್ಮಕ ಚಟುವಟಿಕೆಗಳಿಗೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿದ ಅವರು, ದೇಶದ ಏಕತೆ, ಅಖಂಡತೆ ಹಾಗೂ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ ಸಂಘಟನೆಯನ್ನು ಕಾನೂನಿನ ಚೌಕಟ್ಟಿನಡಿ ತರಬೇಕು ಎಂದು ಆಗ್ರಹಿಸಿದರು.
ಮುಖಂಡ ಮರಿಯಪ್ಪ ಹಳ್ಳಿ ಮಾತನಾಡಿ, ಸಂವಿಧಾನದ ಆಶಯಗಳು, ಸಾಮಾಜಿಕ ಸೌಹಾರ್ದತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಆರೆಸ್ಸೆಸ್ ಚಟುವಟಿಕೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾಧಪೂರ, ಮಹೇಶ ಕೋಕಿಲೆ, ಚಂದ್ರಶೇಖರ ಕಟ್ಟಿಮನಿ, ಮೂರ್ತಿ ಬೊಮ್ಮನಹಳ್ಳಿ, ಮಹೇಶ್ ಸುಂಗಲಕರ ಸೇರಿದಂತೆ ದಲಿತ ಸಂಘರ್ಷ ಸಮಿತಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.






