Kalaburagi | ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದಸಂಸ ಆಗ್ರಹ

ಕಲಬುರಗಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಗುರುವಾರ ನಗರದ ಜಗತ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ. ಸಾಗರ, ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪದೇಪದೇ ನಡೆಯುತ್ತಿರುವ ಅಕ್ರಮಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಹೇಳಿದರು.
ವಿದ್ಯಾರ್ಥಿಗಳ ಕನಸುಗಳನ್ನು ರಕ್ಷಿಸುವುದು ಸರ್ಕಾರದ ಸಂವಿಧಾನಾತ್ಮಕ ಹಾಗೂ ನೈತಿಕ ಕರ್ತವ್ಯವಾಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಿ ಸಮಗ್ರ ಸುಧಾರಣೆ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ದೇಶದಾದ್ಯಂತ ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ದಲಿತ ಸಂಘರ್ಷ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ. ದೆಹಲಿಯ ಜಂತರ್ ಮಂತರ್ ಸೇರಿದಂತೆ ವಿವಿಧೆಡೆ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿ, ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿರುವ ಅವ್ಯವಸ್ಥೆಗಳನ್ನು ನಿವಾರಿಸಿ ಪಾರದರ್ಶಕ ಹಾಗೂ ವಿಶ್ವಾಸಾರ್ಹ ವ್ಯವಸ್ಥೆ ರೂಪಿಸಬೇಕು ಎಂದು ಅವರು ಆಗ್ರಹಿಸಿದರು.
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಹಾಗೂ ಬಲಪ್ರಯೋಗದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ನೀಟ್ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ, ಸಂಬಂಧಿತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ. ಸಾಗರ, ಜಿಲ್ಲಾ ಮುಖಂಡರಾದ ಸುರೇಶ್ ಹಾದಿಮನಿ, ಬಿ.ಸಿ ವಾಲಿ, ಹೆಚ್. ಶಂಕರ, ಎಸ್.ಪಿ. ಸುಳ್ಳದ, ಅಂಬಣ್ಣ ಜೀವಣಗಿ, ಕೃಷ್ಣ ಕರಣಿಕ, ತಿಪ್ಪಣ್ಣ ಧನೇಕರ್, ಮಹಾದೇವ ಕರನಳ್ಳಿ, ನಾಗಪ್ಪ ಕೋರೆ, ಪಿ. ನಂದಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪರಿಣಾಮ ಆತ್ಮಹತ್ಯೆ ಮಾಡಿಕೊಂಡ ಪ್ರತಿಯೊಬ್ಬ ವಿದ್ಯಾರ್ಥಿಯ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು. ಶಾಂತಿಯುತ ಪ್ರತಿಭಟನೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಖಂಡನೀಯ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.
-ಡಿ.ಜಿ. ಸಾಗರ, ರಾಜ್ಯ ಸಂಚಾಲಕ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ






