Kalaburagi | ಜೂ.12 ರಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಗೆ ನಿರ್ಧಾರ

ಕಲಬುರಗಿ : ಜಿಲ್ಲೆಯಾದ್ಯಂತ ಜೂನ್ 12ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ”ಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರಾಯಪ್ಪ ಹುಣಸಗಿ, ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆ ಹಾಗೂ ಕಾಲೇಜುಗಳಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ದಿನಾಚರಣೆ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಭಾಷಣ, ಚಿತ್ರಕಲೆ, ರಸಪ್ರಶ್ನೆ, ನಾಟಕ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ‘ಡಂಗುರ’ ಸಾರುವ ಮೂಲಕ ಪ್ರಚಾರ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕಸ ವಿಲೇವಾರಿ ವಾಹನಗಳ ಧ್ವನಿವರ್ಧಕಗಳ ಮೂಲಕ ಬಾಲಕಾರ್ಮಿಕ ಪದ್ಧತಿ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಇದೇ ವೇಳೆ ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ ಆಯೋಜಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಎನ್.ಸಿ.ಎಲ್.ಪಿ. ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಡಿ.ಎಚ್.ಓ. ಡಾ.ಶರಣಸಬಪ್ಪ ಕ್ಯಾತನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.






