Kalaburagi | ಸೆ.1ರಂದು ಸಿಪಿಐ ನೇತೃತ್ವದಲ್ಲಿ ದೆಹಲಿ ಚಲೋ: ಮಹೇಶಕುಮಾರ್ ರಾಠೋಡ್

ಕಲಬುರಗಿ: ‘ಬದಲಾವಣೆ ಬೇಕೇ ಬೇಕು’ ಎಂಬ ಘೋಷಣೆಯೊಂದಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ವತಿಯಿಂದ ಸೆಪ್ಟೆಂಬರ್ 1ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನಾ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ದೇಶದ ವಿವಿಧ ಭಾಗಗಳಿಂದ ಸುಮಾರು ಒಂದು ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಕರ್ನಾಟಕದಿಂದ 1,000ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ್ ರಾಠೋಡ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹಾಗೂ ಜನಪರ ಬದಲಾವಣೆಗೆ ಒತ್ತಾಯಿಸಿ ‘ದೆಹಲಿ ಚಲೋ’ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಜಿಲ್ಲೆಯಿಂದ ವಿವಿಧ ಹಂತಗಳ 100ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ನಿರಂತರವಾಗಿ ಏರುತ್ತಿರುವ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು, ಯುವಜನರಿಗೆ ಉದ್ಯೋಗ, ಸಾರ್ವಜನಿಕ ಆರೋಗ್ಯ ಹಾಗೂ ಸಾರ್ವತ್ರಿಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು, ಮಹಿಳಾ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂಬ ಬೇಡಿಕೆಗಳನ್ನು ಪ್ರತಿಭಟನೆಯ ಮೂಲಕ ಮುಂದಿಡಲಾಗುವುದು ಎಂದು ಹೇಳಿದರು.
ಚುನಾವಣೆಗಳಲ್ಲಿ ಮತಯಂತ್ರಗಳ ಬದಲಿಗೆ ಮತಪತ್ರಗಳ ಮೂಲಕ ಮತದಾನ ನಡೆಸುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು. ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ದಲಿತರು, ಆದಿವಾಸಿಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳನ್ನು ತಡೆಯಬೇಕು ಎಂಬುದು ಪಕ್ಷದ ಪ್ರಮುಖ ಬೇಡಿಕೆಗಳಾಗಿವೆ ಎಂದರು.
ಸಿಪಿಐ ವತಿಯಿಂದ ಆಗಸ್ಟ್ 6ರಿಂದ 15ರವರೆಗೆ ದೇಶಾದ್ಯಂತ ಪಕ್ಷದ ಶಾಖೆಗಳಿಂದ ಗ್ರಾಮ ಪಂಚಾಯಿತಿ ಕಚೇರಿಗಳವರೆಗೆ ಪಾದಯಾತ್ರೆಗಳನ್ನು ನಡೆಸಲಾಗಿದೆ. ಸರ್ಕಾರದ ಬದಲಾವಣೆ ಏಕೆ ಅಗತ್ಯ ಎಂಬ ಕುರಿತು ಪಕ್ಷದ ಸದಸ್ಯರು, ಸಾಮೂಹಿಕ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ. ಈ ಹೋರಾಟ ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದೆ ಎಂದು ತಿಳಿಸಿದರು.
ಆ.20ರ ಕಲಬುರಗಿ ಬಂದ್‌ಗೆ ಸಿಪಿಐ ಬೆಂಬಲ :
ಮಳೆ ಕೊರತೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ಉದ್ದು, ಹೆಸರು, ಎಳ್ಳು, ಸೋಯಾಬಿನ್ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ. ಹತ್ತಿ, ಕಬ್ಬು ಹಾಗೂ ತೊಗರಿ ಸೇರಿದಂತೆ ಪ್ರಮುಖ ಬೆಳೆಗಳಿಗೂ ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜಿಲ್ಲೆಯನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬಾಕಿ ಇರುವ ಬೆಳೆ ವಿಮೆ ಮೊತ್ತವನ್ನು ಪಾವತಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮಹೇಶಕುಮಾರ್ ರಾಠೋಡ್ ಒತ್ತಾಯಿಸಿದರು.
ಈ ಬೇಡಿಕೆಗಳ ಈಡೇರಿಕೆಗೆ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಆಗಸ್ಟ್ 20ರಂದು ಹಮ್ಮಿಕೊಂಡಿರುವ ‘ಕಲಬುರಗಿ ಬಂದ್’ಗೆ ಸಿಪಿಐ ಕಲಬುರಗಿ ಜಿಲ್ಲಾ ಮಂಡಳಿ ಸಂಪೂರ್ಣ ಬೆಂಬಲ ನೀಡಲಿದೆ. ಪಕ್ಷದ ಕಾರ್ಯಕರ್ತರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬಂದ್‌ನಲ್ಲಿ ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮದ ಬಳಿಕ ‘ಸ್ಥಳ ಶುದ್ಧೀಕರಣ’ದ ಹೆಸರಿನಲ್ಲಿ ನಡೆದಿರುವ ಘಟನೆ ಖಂಡನೀಯ. ಇಂತಹ ಕೃತ್ಯಗಳು ಸಂವಿಧಾನ ವಿರೋಧಿಯಾಗಿದ್ದು, ಅಸ್ಪೃಶ್ಯತೆ ಆಚರಣೆಗೆ ಪ್ರಚೋದನೆ ನೀಡುವ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮೌಲಾ ಮುಲ್ಲಾ, ಪ್ರಭುದೇವ ಯಳಸಂಗಿ, ಸಿದ್ದಪ್ಪ ಫಾಲ್ಕಿ, ಭೀಮಾಶಂಕರ ಮಾಡಿಯಾಳ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.






