ಕಲಬುರಗಿ| ವಿವಾದಿತ ಎಸ್‌ಟಿ ಜಾತಿ ಪ್ರಮಾಣಪತ್ರಗಳ ವಿತರಣೆ ಕುರಿತು ತನಿಖೆ ನಡೆಸಲು ಮಹರ್ಷಿ ವಾಲ್ಮೀಕಿ ಸಮಾಜ ಒತ್ತಾಯ

ಚಿತ್ತಾಪುರ: ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶಗಳು ಹಾಗೂ ರಾಜ್ಯ ಸರ್ಕಾರದ ಆದೇಶಗಳಿದ್ದರೂ ವಿವಾದಿತ ಪರಿಶಿಷ್ಟ ಪಂಗಡ (ಎಸ್‌ಟಿ) ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತಿದೆ ಎಂಬ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಹರ್ಷಿ ವಾಲ್ಮೀಕಿ ಸಮಾಜದ ತಾಲೂಕು ಸಮಿತಿ ಅಧ್ಯಕ್ಷ ಭೀಮರಾವ ದೊರಿ ಅವರ ನೇತೃತ್ವದಲ್ಲಿ ಸಮಾಜದ ಮುಖಂಡರು ತಹಶೀಲ್ದಾರ್ ಮೂಲಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭೀಮರಾವ ದೊರಿ, ಚಿತ್ತಾಪುರ ತಾಲೂಕಿನ ಮಹರ್ಷಿ ವಾಲ್ಮೀಕಿ ಸಮುದಾಯದ ಹಕ್ಕುಗಳು, ಶೈಕ್ಷಣಿಕ ಅವಕಾಶಗಳು, ರಾಜಕೀಯ ಪ್ರಾತಿನಿಧ್ಯ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಬಹುಕಾಲದಿಂದ ಬಗೆಹರಿಯದೆ ಉಳಿದಿವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಈವರೆಗೆ ತೃಪ್ತಿಕರವಾದ ಲಿಖಿತ ಉತ್ತರವಾಗಲಿ, ಪರಿಣಾಮಕಾರಿ ಪರಿಹಾರವಾಗಲಿ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿವಾದಿತ ಎಸ್‌ಟಿ ಜಾತಿ ಪ್ರಮಾಣಪತ್ರಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅನರ್ಹತೆ ಅಥವಾ ವಂಚನೆಯ ಮೂಲಕ ಪ್ರಮಾಣಪತ್ರ ಪಡೆದಿರುವುದು ತನಿಖೆಯಲ್ಲಿ ದೃಢಪಟ್ಟರೆ, ಕಾನೂನುಬದ್ಧ ಪ್ರಕ್ರಿಯೆಯ ಮೂಲಕ ಅವುಗಳನ್ನು ರದ್ದುಪಡಿಸಬೇಕು. ಕರ್ನಾಟಕ ಉಚ್ಚ ನ್ಯಾಯಾಲಯದ ಸಂಬಂಧಿತ ಆದೇಶಗಳು ಹಾಗೂ ರಾಜ್ಯ ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಒತ್ತಾಯಿಸಿದರು.
ಬೇಡಿಕೆ ಈಡೇರದಿದ್ದರೆ ವಾಲ್ಮೀಕಿ ಜಯಂತಿ ಬಹಿಷ್ಕಾರ
ಚಿತ್ತಾಪುರ ಪಟ್ಟಣದ ಪ್ರಜಾಸೌಧದ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲು ಉದ್ದೇಶಿಸಿರುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಲು ಮಹರ್ಷಿ ವಾಲ್ಮೀಕಿ ಸಮಾಜದ ಮುಖಂಡರು ನಿರ್ಧರಿಸಿದ್ದಾರೆ.
ಸಮುದಾಯದ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ತೃಪ್ತಿಕರವಾದ ಲಿಖಿತ ಉತ್ತರ ನೀಡಬೇಕು. ಸಮಸ್ಯೆಗಳ ಪರಿಹಾರಕ್ಕಾಗಿ ಸ್ಪಷ್ಟ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವವರೆಗೆ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಸಮಾಜದ ತಾಲೂಕು ಸಮಿತಿ ಉಪಾಧ್ಯಕ್ಷ ಸುಭಾಷ್ಚಂದ್ರ, ಯುವ ಘಟಕದ ಅಧ್ಯಕ್ಷ ರಾಮಕೃಷ್ಣ ಜಮದಾರ, ಉಮೇಶ ಚಾಮನೂರ, ಭಾಗೇಶ ಮೊಗಲಾ, ರಾಜು ಚಿತ್ತಾಪುರ, ಸಾಬಣ್ಣ ಲಾಡ್ಲಾಪುರ ಸೇರಿದಂತೆ ಸಮಾಜದ ಹಲವು ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.






